
Bangalore: 14 ಜಿಲ್ಲೆಗಳಲ್ಲಿ ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ
16/07/2025 05:34 AM
ರಾಜ್ಯದ ಹದಿನಾಲ್ಕು ಜಿಲ್ಲೆಗಳಲ್ಲಿ ಜುಲೈ 22ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವುಗಳಲ್ಲಿ ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇನ್ನುಳಿದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು.
ರಾಜ್ಯದ ಏಳು ಜಿಲ್ಲೆಗಳಲ್ಲಿ ಅಂದರೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ, ಮೈಸೂರು, ಮಂಡ್ಯ, ಶಿವಮೊಗ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೀದರ್, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ತಿಳಿಸಿದೆ.