
Bangalore: ನಾಲ್ಕು ಜಿಲ್ಲೆಗಳ ಆರು ಕಡೆ ಲೋಕಾಯುಕ್ತ ದಾಳಿ
ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಜಿಲ್ಲೆಗಳ ಆರು ಕಡೆಗಳಲ್ಲಿ ಇಂದು ಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಅಕ್ರಮ ಆಸ್ತಿ ಹೊಂದಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಎರಡು ಕಡೆಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿತ ಅಧಿಕಾರಿಗಳ ಮನೆಗಳಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಕಂದಾಯ ಅಧಿಕಾರಿ ಎನ್. ವೆಂಕಟೇಶ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಓಂ ಪ್ರಕಾಶ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಎಇಎಂ ಆಂಜನೇಯಮೂರ್ತಿ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ ನಡೆದಿದೆ.
ಹಾಸನದಲ್ಲಿ ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಇಂಜಿನಿಯರ್ ಜಯಣ್ಣ ಅವರ ಮನೆ, ಫಾರ್ಮ್ ಹೌಸ್ ಮತ್ತು ಅಂಗಡಿಗಳ ಮೇಲೆಯೂ ದಾಳಿ ನಡೆಸಿದ್ದಾರೆ.
ಹಾಸನದ ಚನ್ನಪಟ್ಟಣ ಹೌಸಿಂಗ್ ಬೋರ್ಡ್‌ನ ಮನೆ, ಪೈಂಟ್ ಅಂಗಡಿ, ಜಯನಗರದ ಮನೆ ಮತ್ತು ಕೊಡಗು ಜಿಲ್ಲೆ ಕುಶಾಲನಗರದಲ್ಲಿರುವ ಫಾರ್ಮ್ ಹೌಸ್ ಮೇಲೆ ಏಕ ಕಾಲದಲ್ಲಿ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಲಾಗ್ತಿದೆ.
ಚಿತ್ರದುರ್ಗದ ಹಿರಿಯೂರು ತಾಲೂಕು ಆರೋಗ್ಯಾಧಿಕಾರಿ ಡಾ. ಟಿ. ವೆಂಕಟೇಶ್ ಅವರ ಮನೆ, ಕ್ಲಿನಿಕ್, ಹಾಗೂ ಆದಿವಾಲ ಗ್ರಾಮದ ಮನೆ ಮತ್ತು ಕ್ಲಿನಿಕ್ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್.ಪಿ. ವಾಸುದೇವ್ ರಾಮ್ ಮತ್ತು ಡಿ.ವೈ.ಎಸ್.ಪಿ. ಮೃತ್ಯುಂಜಯ ನೇತೃತ್ವದಲ್ಲಿ ಈ ಪರಿಶೀಲನೆ ನಡೆಯುತ್ತಿದೆ.