
Bantwal: ಗ್ರಾಮಾಂತರ ಠಾಣಾ ಪಿಎಸ್‌ಐ ಆತ್ಮಹತ್ಯೆ; ಪ್ರಕರಣ ದಾಖಲು
21/07/2025
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿAದ ತನಿಖಾ ಪಿಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಘಟಕಾಂಬ್ಳೆ (55) ಅವರು ಭಾನುವಾರ ಬಂಟ್ವಾಳದ ತಾವು ವಾಸಿಸುತ್ತಿದ್ದ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖೀರಪ್ಪ ಅವರು ತಮ್ಮ ವೈಯಕ್ತಿಕ ಹಾಗೂ ಹಣಕಾಸಿನ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಉತ್ತರ ಕನ್ನಡದ ಕಾರವಾರ ಮೂಲದವರಾದ ಅವರು, ಜುಲೈ 19ರಂದು ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ್ದರು. ಭಾನುವಾರ ಕರ್ತವ್ಯಕ್ಕಾಗಿ ಠಾಣೆಯಿಂದ ದೂರವಾಣಿ ಕರೆ ಮಾಡಿದಾಗ ಸ್ಪಂದಿಸದ ಹಿನ್ನೆಲೆಯಲ್ಲಿ, ಠಾಣಾ ಸಿಬ್ಬಂದಿ ಮನೆಗೆ ತೆರಳಿ ಪರಿಶೀಲಿಸಿದ್ದಾರೆ. ಮನೆ ಬೀಗ ಹಾಕಿದ ಸ್ಥಿತಿಯಲ್ಲಿತ್ತು. ಹೊರಗಡೆಯಿಂದ ಕರೆದರೂ ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಕಿಟಕಿಯಿಂದ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಖೀರಪ್ಪ ಘಟಕಾಂಬ್ಳೆ ಶಿರಸಿ ಠಾಣೆಯಿಂದ ಸಬ್ ಇನ್ಸ್ಪೆಕ್ಟರ್ ಆಗಿ ಬಡ್ತಿಗೊಂಡು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ತನಿಖೆ- 2 ವಿಭಾಗಕ್ಕೆ ವರ್ಗಾವಣೆಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಪ್ರಕಟಣೆಯಲ್ಲಿ ವಿವರಿಸಲಾಗಿದೆ.