Mangalore: ದ.ಕ ಜಿ.ಪಂ ನೇತ್ರಾವತಿ ಸಭಾಂಗಣದಲ್ಲಿ ಶಾಂತಿ ಸಭೆ
10/07/2025 07:51 AM
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾರೂ ಕೂಡಾ ಭಯದ ವಾತಾವರಣದಲ್ಲಿ ಬದುಕುವ ಸ್ಥಿತಿ ನಿರ್ಮಾಣವಾಗಬಾರದು, ಅದಕ್ಕೆ ಯಾವತ್ತೂ ಅವಕಾಶ ನೀಡಬಾರದು. ಶಾಂತಿ ಮರುಸ್ಥಾಪನೆಯಾಗಬೇಕೆಂದು ರಾಜ್ಯ ಗೃಹಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ನಡೆದ ಶಾಂತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮತೀಯ ಗೂಂಡಾಗಿರಿ ನಡೆಸಬಾರದು. ಗೋಹತ್ಯೆ ನಡೆದರೆ, ಗೋವುಗಳ ಅಕ್ರಮ ಸಾಗಾಟ ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದರು. ಜಿಲ್ಲೆಯ ಕೆಂಪು ಕಲ್ಲು ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ಸರ್ಕಾರಕ್ಕೆ ಪಾವತಿಯಾಗಬೇಕಾದ ತೆರಿಗೆ ಕಟ್ಟಿ, ಪರವಾನಿಗೆ ಪಡೆದು, ಅಧಿಕೃತವಾಗಿ ಕೆಂಪು ಕಲ್ಲು ತೆಗೆಯುವುದಕ್ಕೆ ಅಡ್ಡಿ ಇಲ್ಲ. ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನು ಸಭೆಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಗಣೇಶೋತ್ಸವ ಆಚರಣೆಗೆ ನಿರ್ಬಂಧ, ಹಿಂದೂ ಮುಖಂಡರನ್ನು ಸ್ವಾಮೀಜಿಗಳನ್ನು ಸಭೆಗೆ ಆಹ್ವಾನಿಸಿಲ್ಲ ಎಂಬ ಬಗ್ಗೆ ಆಕ್ಷೇಪ ವ್ಯಕ್ತವಾಯಿತು. ಇದಕ್ಕೆ ಪ್ರತಿಯಿಸಿದ ದಿನೇಶ್ ಗುಂಡೂರಾವ್, ಎಲ್ಲಾ ಧರ್ಮದ ಮುಖಂಡರನ್ನು ಸಭೆಗೆ ಆಹ್ವಾನಿಸಿದ್ದೇವೆ, ಏನಾದ್ರೂ ಲೋಪವಾಗಿದ್ದರೆ ಸರಿಪಡಿಸಿಕೊಳ್ಳುವುದಾಗಿ ಹೇಳಿದ್ರು. ಸಭೆಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ, ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮೊದಲಾದವರು ಇದ್ದರು.