
NewDelhi: ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ದುರಂತ- ಇಬ್ಬರು ಸಾವು
12/07/2025 07:16 AM
ಈಶಾನ್ಯ ದೆಹಲಿಯ ವೆಲ್ಕಮ್ ಪ್ರದೇಶದ ಜುಲೈ 12ರ ಬೆಳಗ್ಗೆ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಅಲ್ಲದೆ, 9 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಹಲವರು ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಿಸಲ್ಪಟ್ಟ ಎಲ್ಲರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರ ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಬೆಳಗ್ಗೆ ಸುಮಾರು 7 ಗಂಟೆಯಿOದ ಏಳು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ಬಗ್ಗೆ ತನಿಖೆ ನಡೆಸುವಂತೆ ಸ್ಥಳೀಯ ಆಡಳಿತ ಮಂಡಳಿ ಆದೇಶಿಸಿದೆ. ದೆಹಲಿ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಎನ್‌ಡಿಆರ್‌ಎಫ್ ತಂಡಗಳು ವಿಶೇಷ ಉಪಕರಣಗಳ ಸಹಾಯದಿಂದ ಅವಶೇಷಗಳನ್ನು ತೆಗೆಯುವ ಮೂಲಕ ಅದರಡಿಯಲ್ಲಿ ಸಿಲುಕಿರುವ ಜನರನ್ನು ಸುರಕ್ಷಿತವಾಗಿ ಹೊರತೆಗೆಯಲು ಪ್ರಯತ್ನಿಸುತ್ತಿವೆ.