
Shimogga: ಮಲೆನಾಡಿನಲ್ಲಿ ಮಳೆಯ ಅಬ್ಬರ; ಶಾಲಾ ಕಾಲೇಜಿಗೆ ರಜೆ ಘೋಷಣೆ
25/07/2025
ಮಲೆನಾಡಿನಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲೂಕುಗಳ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ಜುಲೈ 25 ರಂದು ರಜೆ ಘೋಷಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ತೀರ್ಥಹಳ್ಳಿ, ಹೊಸನಗರ ಹಾಗೂ ಸಾಗರ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿರುವುದರಿಂದ ಅಲ್ಲಿನ ತಾಲೂಕು ಆಡಳಿತಗಳು ಅಂಗನವಾಡಿ ಸೇರಿದಂತೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಈ ಕುರಿತು ನಾಲ್ಕು ತಾಲೂಕಿನ ತಹಶೀಲ್ದಾರರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಮಳೆ ಜೋರಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಾಲೂಕು ಆಡಳಿತಗಳು ತಮ್ಮ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿವೆ. ಜುಲೈ 25ರಂದು ರಜೆ ನೀಡಿರುವುದರಿಂದ ಮುಂದಿನ ದಿನಗಳಲ್ಲಿ ಶನಿವಾರದಂದು ಪೂರ್ಣ ತರಗತಿಗಳನ್ನು ನಡೆಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.