
Udupi:ಕಾಪು ಶ್ರೀ ಹೊಸ ಮಾರಿಯಮ್ಮ ದೇವಸ್ಥಾನಕ್ಕೆ ಅಶ್ವಿನಿ ಪುನೀತ್ರಾಜ್ಕುಮಾರ್ ಭೇಟಿ
11/07/2025 07:23 AM
ಉಡುಪಿಯ ಕಾಪು ಶ್ರೀ ಹೊಸ ಮಾರಿಯಮ್ಮ ದೇವಸ್ಥಾನಕ್ಕೆ ನಟ ದಿವಂಗತ ಡಾ. ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ರಾಜ್ಕುಮಾರ್ ಅವರು ಭೇಟಿ ನೀಡಿದರು. ಮಾರಿಯಮ್ಮನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಪ್ರಸಾದ ಸ್ವೀಕರಿಸಿದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಅನುಗ್ರಹ ಪ್ರಸಾದ ನೀಡಿದರು, ಬಳಿಕ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಪುತ್ರಿ ವಂದಿತಾ ರಾಜ್ ಕುಮಾರ್ ಮತ್ತವರ ಸ್ನೇಹಿತೆಯರು ಜೊತೆಗಿದ್ದರು.
ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ,ದೇವಿಯ ಮುಖದಲ್ಲಿ ಆಕರ್ಷಣೆಯಿದೆ, ಇಲ್ಲಿಗೆ ಬಂದರೆ ನನ್ನ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.