
Bangalore: ಕಾಲ್ತುಳಿತ ಪ್ರಕರಣ; ಅಮಾನತ್ತಾಗಿದ್ದ ಐಪಿಎಸ್ ಅಧಿಕಾರಿಗಳಿಗೆ ಹುದ್ದೆ
01/08/2025
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬ0ಧಿಸಿ ನಾಲ್ವರು ಐಪಿಎಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ ಅವರಿಗೆ ಹುದ್ದೆ ನೀಡಿ ಆದೇಶಿಸಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ ಅವರನ್ನು ಕಾರಾಗೃಹ ಮತ್ತು ಸುಧಾರಣೆ ಇಲಾಖೆಯ ಎಡಿಜಿಪಿಯಾಗಿ ನೇಮಕ ಮಾಡಲಾಗಿದೆ. ಆ ಇಲಾಖೆಯ ಡಿಜಿಪಿಯಾಗಿದ್ದ ಮಾಲಿನಿ ಕೃಷ್ಣ ಮೂರ್ತಿ ಅವರು ನಿವೃತ್ತಿಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ದಯಾನಂದ ಅವರನ್ನು ನಿಯೋಜಿಸಿದೆ. ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿಯಾಗಿ, ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಶೇಕರ್ ಟೆಕ್ಕಣ್ಣನವರ ಅವರನ್ನು ನಗರ ಗುಪ್ತವಾರ್ತೆ ಡಿಸಿಪಿಯಾಗಿ ನಿಯುಕ್ತಿಗೊಳಿಸಿ ಗೃಹ ಇಲಾಖೆ ಆದೇಶ ಹೊರಡಿಸಿದೆ.
ಜೂ. 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಿಂದ 11 ಮಂದಿ ಸಾವನ್ನಪ್ಪಿದ್ದರು. ಘಟನೆಗೆ ಪೊಲೀಸ್ ಇಲಾಖೆಯ ವೈಫಲ್ಯವೇ ಕಾರಣ ಎಂದು ಆರೋಪಿಸಿ ಮೂವರು ಐಪಿಎಸ್ ಅಧಿಕಾರಿಗಳ ಸಹಿತ ಐದು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಅಲ್ಲದೇ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ್ ಹಾಗೂ ನಿವೃತ್ತ ನ್ಯಾಯಾಧೀಶ ಮೈಕಲ್ ಡಿ.ಕುನ್ಹಾ ನೇತೃತ್ವದಲ್ಲಿ ಪ್ರತ್ಯೇಕ ತನಿಖೆ ನಡೆಸುವಂತೆ ಸೂಚಿಸಿತ್ತು. ಇದರಂತೆ ಎರಡು ತನಿಖಾ ಸಂಸ್ಥೆಗಳು ತನಿಖೆ ನಡೆಸಿ ವರದಿ ನೀಡಿದ್ದವು. ಕೂಲಂಕಷವಾಗಿ ಪರಿಶೀಲಿಸಿ ನಾಲ್ವರು ಅಧಿಕಾರಿಗಳ ಅಮಾನತು ಆದೇಶವನ್ನು ಸರ್ಕಾರ ರದ್ದು ಮಾಡಿತ್ತು.