
Bangalore: ಧರ್ಮಸ್ಥಳ ವಿಚಾರದಲ್ಲಿ ಬಿಜೆಪಿಯಿಂದ ರಾಜಕಾರಣ; ಡಿಕೆಶಿ ಆರೋಪ
ಧರ್ಮಸ್ಥಳದ ವಿರುದ್ಧ ಮುಸುಕುಧಾರಿ ನ್ಯಾಯಾಲಯದಲ್ಲಿ ದೂರು ಕೊಟ್ಟಾಗ ಮಾತನಾಡದ ಬಿಜೆಪಿಗರು ಈಗ ರಾಜಕೀಯ ಮಾಡುತ್ತಿದ್ದಾರೆ. ಹಿಂದುತ್ವ ತಮ್ಮ ಮನೆ ಆಸ್ತಿ ಎಂದು ಅವರು ಭಾವಿಸಿದ್ದಾರೆ. ಬಿಜೆಪಿಯವರಿಗೆ ಧರ್ಮಸ್ಥಳದ ಮೇಲೆ ಪ್ರೀತಿ ಇಲ್ಲ, ಅವರಿಗೆ ಬರೀ ರಾಜಕೀಯಕ್ಕಾಗಿ ಧರ್ಮಸ್ಥಳ ಬೇಕಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರ ನಿಯೋಗ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದೆ ಎಂದು ಕೇಳಿದ ಪ್ರಶ್ನೆಗೆ, ಬಿಜೆಪಿಯವರು ಆರಂಭದಲ್ಲಿ ಏನೂ ಮಾತನಾಡಿರಲಿಲ್ಲ. ಈಗ ರಾಜಕಾರಣ ಮಾಡುತ್ತಿದ್ದಾರೆ. ಅವರು ಹಿಂದುತ್ವವನ್ನು ಅವರ ಮನೆ ಆಸ್ತಿ ಎಂದು ಭಾವಿಸಿದ್ದಾರೆ. ಇದು ಯಾರೊಬ್ಬರ ಆಸ್ತಿಯಲ್ಲ. ಅವರವರ ಭಕ್ತಿ, ನಂಬಿಕೆ ಭಾವನೆಗೆ ಸಂಬ0ಧಿಸಿದ್ದು. ಬಿಜೆಪಿಯವರದ್ದು ರಾಜಕಾರಣ ಬಿಟ್ಟರೆ ಬೇರೇನೂ ಇಲ್ಲ ಎಂದು ಟೀಕಿಸಿದರು.
ಮುಸುಕುಧಾರಿ ದೂರು ಕೊಟ್ಟ ದಿನ ಬಿಜೆಪಿಯವರು ಯಾಕೆ ಮಾತನಾಡಲಿಲ್ಲ? ಆತನ ದೂರು ಸರಿಯಿಲ್ಲ ಎಂದು ಯಾಕೆ ಹೇಳಲಿಲ್ಲ. ಎಸ್‌ಐಟಿ ರಚಿಸಿದ ಮೊದಲ ದಿನ ಯಾಕೆ ಮಾತನಾಡಲಿಲ್ಲ ನಮಗೆ ರಾಜಕೀಯಕ್ಕೆ ಧರ್ಮಸ್ಥಳ ಬೇಡ. ಧರ್ಮಸ್ಥಳದ ಗೌರವ ಕಾಪಾಡುವುದು ನಮ್ಮ ಚಿಂತನೆ. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಆಗಲಿ ಎನ್ನುವವರು ನಾವು. ನ್ಯಾಯಾಲಯದ ಮುಂದೆ ದೂರು ನೀಡಿದ ನಂತರವೂ ಸರ್ಕಾರ ತನಿಖೆ ಮಾಡದಿದ್ದರೇ ಬಿಜೆಪಿಯವರು ಏನು ಹೇಳುತ್ತಿದ್ದರು? ಅವರೇ ಟೀಕೆ ಮಾಡುತ್ತಿರಲಿಲ್ಲವೇ? ಈಗ ಈ ರೀತಿ ರಾಜಕಾರಣ ಮಾಡುತ್ತಿದ್ದು, ನಾವು ಇದಕ್ಕೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ತಿಳಿಸಿದರು.
ಮುಸುಕುಧಾರಿ ದೂರುದಾರನಿಗೆ ಮಂಪರು ಪರೀಕ್ಷೆ ಮಾಡಬೇಕು ಎಂಬ ಬೇಡಿಕೆ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ಅವರು ಏನಾದರೂ ಆಗ್ರಹ ಮಾಡಲಿ, ಮಂಪರು ಪರೀಕ್ಷೆ ಅಥವಾ ಬೇರೆ ಯಾವುದೇ ತನಿಖೆಗೆ ಬೇಕಾದರೂ ಆಗ್ರಹಿಸಲಿ. ಅದು ತಪ್ಪಲ್ಲ. ಎಸ್‌ಐಟಿ ತನಿಖೆ ಸ್ವಾಗತಿಸಿದವರು ಇಂದು ಈ ರೀತಿ ಮಾತನಾಡುತ್ತಿದ್ದಾರೆ. ಎಷ್ಟು ಗುಂಡಿ ತೆಗೆಯಬೇಕು, ಬೇಡ ಎಂದು ತನಿಖಾಧಿಕಾರಿಗಳು ನಿರ್ಧರಿಸುತ್ತಾರೆ. ಅವರ ತನಿಖೆಯಲ್ಲಿ ನಾವೇಕೆ ಹಸ್ತಕ್ಷೇಪ ಮಾಡಬೇಕು ಎಂದು ಮರುಪ್ರಶ್ನಿಸಿದರು.