
Udupi: ಆ. 23-25: ಕಿರಿಯರ, 23ರ ವಯೋಮಿತಿಯ ರಾಜ್ಯಮಟ್ಟದ ಕ್ರೀಡಾಕೂಟ
ಕರ್ನಾಟಕ ರಾಜ್ಯ ಕಿರಿಯರ ಹಾಗೂ 23ರ ವಯೋಮಿತಿಯ ಕ್ಕ್ರೀರೀಡಳುಗಳ ಕ್ರೀಡಾಕೂಟವು ಆಗಸ್ಟ್ 23ರಿಂದ 25ರ ವರೆಗೆ ಉಡುಪಿಯ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕ್ರೀಡಾಕೂಟದ ಪೂರ್ವ ತಯಾರಿಯ ಬಗ್ಗೆ ಚರ್ಚಿಸಲು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ರಾಜ್ಯ ಮಟ್ಟದ ಕ್ರೀಡೆಯು ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆಯಲಿದ್ದು, ಇಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಅಖಿಲ ಭಾರತ ದಕ್ಷಿಣ ವಲಯ ಕ್ರೀಡಾಕೂಟಕ್ಕೆ ಆಯ್ಕೆಯಾಗಲಿದ್ದಾರೆ. ಕ್ರೀಡಾಕೂಟವು ಫೆಡರೇಶನ್ ಆಫ್ ಇಂಡಿಯಾ ಅನ್ವಯ ನಡೆಯುಲಿದೆ ಎಂದರು.
ಕ್ರೀಡಾಕೂಟದಲ್ಲಿ ರಾಜ್ಯದ ವಿವಿಧೆಡೆಯಿಂದ 1500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದು, ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಕ್ರೀಡಾ ಮೈದಾನದ ವ್ಯವಸ್ಥೆ, ಕ್ರೀಡಾ ಸಲಕರಣೆ, ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೊರ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾ ಸ್ಪರ್ಧೆಗಳಿಗೆ ತಂಗಲು ಅನುಕೂಲವಾಗುವಂತೆ ಮಹಿಳಾ ಹಾಗೂ ಪುರುಷ ಕ್ರೀಡಾಪಟುಗಳಿಗೆ ಪ್ರತ್ಯೇಕ ವಸತಿ ವ್ಯವಸ್ಥೆಯನ್ನು ಕಲ್ಪಿಸಬೇಕು. ಕ್ರೀಡಾಪಟುಗಳು, ತರಬೇತುದಾರರು, ಅಂಪೖರ್ ಸೇರಿದಂತೆ ಮತ್ತಿತರ ಅಧಿಕಾರಿಗಳಿಗೆ ಉಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಬೇಕು. ಕ್ರೀಡಾಪಟುಗಳ ಭದ್ರತೆಗೆ ಅಗತ್ಯವಿರುವ ಪೊಲೀಸ್ ಬಂದೋಬಸ್ತ್ ನಿಯೋಜಿಸಬೇಕು. ವೈದ್ಯರುಗಳನ್ನು ಒಳಗೊಂಡ ವೈದ್ಯಕೀಯ ತಂಡವನ್ನು ತುರ್ತು ಚಿಕಿತ್ಸೆಗೆ ನಿಯೋಜಿಸಬೇಕು. ಆಂಬುಲೆನ್ಸ್ ವ್ಯವಸ್ಥೆಯನ್ನು ಸಹ ಕಲ್ಪಿಸಬೇಕು ಎಂದರು.
ಸಭೆಯಲ್ಲಿ ಮಾಜಿ ಶಾಸಕ ರಘುಪತಿ ಭಟ್, ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆಯ ಉಪಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ಅಥ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ, ಎ.ಎಸ್.ಪಿ ಸುಧಾಕರ್ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಷನ್ ಕುಮಾರ್ ಶೆಟ್ಟಿ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.