-->
 ಪ್ರವಾಸಿ ಬೋಟುಗಳಿಗೆ ಕಡಲಿಗಿಳಿಯಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸ್ವರೂಪ

ಪ್ರವಾಸಿ ಬೋಟುಗಳಿಗೆ ಕಡಲಿಗಿಳಿಯಲು ಅನುಮತಿ ಕಡ್ಡಾಯ: ಜಿಲ್ಲಾಧಿಕಾರಿ ಸ್ವರೂಪ


ಉಡುಪಿ ಜಿಲ್ಲೆಯ ಕಡಲ ತೀರಗಳು ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳ ಸೌಂದರ್ಯ ಸವಿಯಲು ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯಾವುದೇ ಪ್ರಾಣಾಪಾಯಗಳು ಸಂಭವಿಸದOತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ತಿಳಿಸಿದ್ದಾರೆ. 


ಕೋಡಿಬೆಂಗ್ರೆ ಬೀಚ್ ನಲ್ಲಿ ಪ್ರವಾಸೀ ಬೋಟ್ ದುರಂತಕ್ಕೀಡಾದ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ಕುರಿತಂತೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಜಿಲ್ಲೆಯ ಎಲ್ಲಾ ಪ್ರವಾಸಿ ಬೋಟ್‌ಗಳು ಬಂದರು, ಪೊಲೀಸ್, ಕರಾವಳಿ ಕಾವಲು ಪಡೆ, ಸ್ಥಳೀಯ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಅನುಮತಿಯನ್ನು ಪಡೆದೇ ಕಡಲಿಗೆ ಇಳಿಯಬೇಕು. ಈ ಸಂಬOಧ ಜಿಲ್ಲೆಯಲ್ಲಿರುವ ಎಲ್ಲಾ ಪ್ರವಾಸಿ ಬೋಟುಗಳು 45 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಿಂದ ನೋಂದಣಿ ಮಾಡಿಕೊಂಡು ಅನುಮತಿಯನ್ನು ಪಡೆದುಕೊಳ್ಳತಕ್ಕದ್ದು. ಅನುಮತಿಯನ್ನು ಪಡೆಯದೇ ಇರುವ ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಅನುಮತಿ ಪಡೆದ ಪ್ರವಾಸಿ ಬೋಟ್‌ಗಳು ಪ್ರತೀ ವರ್ಷ ತಮ್ಮ ಪರವಾನಿಗೆಯನ್ನು ನವೀಕರಿಸಿಕೊಳ್ಳಬೇಕಾಗಿರುತ್ತದೆ. ಪ್ರವಾಸಿ ಬೋಟ್‌ಗಳಲ್ಲಿ ಪ್ರವಾಸಿಗರ ಹಿತದೃಷ್ಠಿಯಿಂದ ಲೈಫ್ ಜಾಕೆಟ್ ಧರಿಸುವುದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರತಿಯೊಬ್ಬ ಪ್ರವಾಸಿಗರು ಕಡಲಿಗೆ ಇಳಿಯುವ ಮುನ್ನ ಲೈಫ್ ಜಾಕೆಟ್ ಧರಿಸುವಂತೆ ನೋಡಿಕೊಳ್ಳಬೇಕು. ಪ್ರವಾಸಿ ಬೋಟ್‌ಗಳಲ್ಲಿ ಎಲ್ಲರೂ ಲೈಫ್ ಜಾಕೆಟ್ ಧರಿಸಿದ್ದಲ್ಲಿ ಮಾತ್ರ ಬೋಟ್ ಮುಂದೆ ಸಾಗಲಿದೆ ಎಂಬ ಪ್ರೀ-ರೆಕಾರ್ಡೆಡ್ ಆಡಿಯೋವನ್ನು ಬೋಟ್‌ಗಳಲ್ಲಿ ಹೊರಡಿಸಲು ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಯಿತು. 



ಮುಂದಿನ ದಿನಗಳಲ್ಲಿ ಪ್ರವಾಸೋದ್ಯಮ ಉದ್ದೇಶಕ್ಕೆ ಬಳಸುವ ಪ್ರವಾಸಿ ಬೋಟ್ ಮಾಲೀಕರುಗಳ ಸಭೆಯನ್ನು ಶೀಘ್ರದಲ್ಲಿ ಕರೆದು ಪ್ರವಾಸಿ ಬೋಟ್‌ಗಳ ಸಂಚಾರಕ್ಕೆ ಪರವಾನಿಗೆಯನ್ನು ಪಡೆಯುವಂತೆ, ಪ್ರವಾಸಿ ಬೋಟ್‌ಗಳ ಮಾಲೀಕರುಗಳು ಹಾಗೂ ಅದನ್ನು ಚಲಾಯಿಸುವವರಿಗೆ ಕಾರ್ಯಾಗಾರ ಆಯೋಜಿಸುವ ಬಗ್ಗೆ, ಸುರಕ್ಷತಾ ವಿಧಾನ ಅನುಸರಿಸುವ ಬಗ್ಗೆ, ವಿಮೆ ಸೌಲಭ್ಯ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡುವ ಬಗ್ಗೆ, ಲೈಫ್ ಜಾಕೆಟ್ ಬಳಸುವ ಕುರಿತು ಕರಪತ್ರಗಳನ್ನು ಸಮುದ್ರ ತೀರ ಸೇರಿದಂತೆ ಪ್ರವಾಸಿಗರು ಹೆಚ್ಚಾಗಿ ಸೇರುವಲ್ಲಿ ಪ್ರದರ್ಶಿಸುವ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು. 

ಸಭೆಯಲ್ಲಿ ಉಡುಪಿ ಜಿಲ್ಲಾ ಎಸ್ಪಿ ಹರಿರಾಂ ಶಂಕರ್, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಪ್ರವಾಸೋದ್ಯ ಇಲಾಖೆಯ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ ಉಪಸ್ಥಿತರಿದ್ದರು. 


Ads on article

Advertise in articles 1

advertising articles 2

Advertise under the article