ಕೋಡಿಬೆಂಗ್ರೆ ಪ್ರವಾಸಿ ದೋಣಿ ಪಲ್ಟಿ; ಅಸ್ವಸ್ಥಗೊಂಡಿದ್ದ ಇಬ್ಬರು ಸಾವು
ಕೋಡಿಬೆಂಗ್ರೆ ಬೀಚ್‌ನಲ್ಲಿ ಪ್ರವಾಸಿಗರನ್ನು ವಿಹಾರಕ್ಕೆ ಕರೆದೊಯ್ಯುತ್ತಿದ್ದ ದೋಣಿಯೊಂದು ಪಲ್ಟಿಯಾಗಿ ಗಂಭೀರ ಸ್ಥಿತಿಯಲ್ಲಿದ್ದ ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಮೃತರನ್ನು ಶಂಕರಪ್ಪ (22) ಹಾಗೂ ಸಿಂಧು (23) ಎಂದು ಗುರುತಿಸಲಾಗಿದ್ದು, ದೀಶಾ (26) ಅತಿಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧರ್ಮರಾಜ (26) ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ರೆಸಾರ್ಟ್ನಲ್ಲಿ ವಾಸ್ತವ್ಯ ಹೊಂದಿದ್ದ ಪ್ರವಾಸಿಗರನ್ನು ದೋಣಿಯಲ್ಲಿ ಸಮುದ್ರ ವಿಹಾರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಸಮುದ್ರದ ಮಧ್ಯಭಾಗದಲ್ಲಿ ದೋಣಿ ಅಕಸ್ಮಿಕವಾಗಿ ಪಲ್ಟಿಯಾಗಿದ್ದು, ಇದರಿಂದ ದೋಣಿಯಲ್ಲಿದ್ದ 10 ಮಂದಿ ಪ್ರವಾಸಿಗರು ನೀರಿಗೆ ಬಿದ್ದಿದ್ದರು. ಘಟನೆಯಲ್ಲಿ ನಾಲ್ವರು ಪ್ರವಾಸಿಗರು ತೀವ್ರ ಅಸ್ವಸ್ಥಗೊಂಡಿದ್ದು, ಅವರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿತ್ತು. ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಯಾಣಿಕರೆಲ್ಲರೂ ಮೈಸೂರು ಜಿಲ್ಲೆಯ ಸರಸ್ವತಿಪುರಂ ಮೂಲದವರಾಗಿದ್ದು, ಅಲ್ಲಿನ ಖಾಸಗಿ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದರು. ಮಲ್ಪೆ ಮತ್ತು ಕೋಟ ಪೊಲೀಸ್ ಠಾಣಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.