-->
 ಅಂತರ್ ಜಿಲ್ಲಾ ಕಳ್ಳನ ಬಂಧನ; ಲಕ್ಷಾಂತರ ಮೌಲ್ಯ ಚಿನ್ನಾಭರಣ ಜಪ್ತಿ

ಅಂತರ್ ಜಿಲ್ಲಾ ಕಳ್ಳನ ಬಂಧನ; ಲಕ್ಷಾಂತರ ಮೌಲ್ಯ ಚಿನ್ನಾಭರಣ ಜಪ್ತಿ


ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್ ಕಳ್ಳತನ ಮಾಡುತ್ತಿದ್ದ ಅಂತರ್‌ಜಿಲ್ಲಾ ಕಳ್ಳನನ್ನು ಮಂಗಳೂರು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿಯ ನಿವಾಸಿ ಮಹಮ್ಮದ್ ಇಮ್ರಾನ್ ಎನ್.ಎಂ. (44) ಬಂಧಿತ ಆರೋಪಿ. ಈತನಿಂದ ಒಟ್ಟು 6,47,920 ರೂಪಾಯಿ ಮೌಲ್ಯದ 46.28 ಗ್ರಾಂ ಚಿನ್ನಾಭರಣ ಹಾಗೂ 5,000 ರೂಪಾಯಿ ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಜನವರಿ 23ರಂದು ಸಂಜೆ ಸುಮಾರು 7 ಗಂಟೆ ವೇಳೆಗೆ, ಬೆಂಗಳೂರಿಗೆ ತೆರಳಲು ಬಸ್ಸಿನಲ್ಲಿ ಕುಳಿತಿದ್ದ ಇಬ್ಬರು ಮಹಿಳೆಯರು ಹಾಗೂ ಹಿರಿಯ ನಾಗರಿಕರ ಚಿನ್ನಾಭರಣ ಮತ್ತು ನಗದು ಹೊಂದಿದ್ದ ಟ್ರಾಲಿ ಬ್ಯಾಗ್ ಕಳವಾಗಿತ್ತು. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗೆ ವಿಶೇಷ ತಂಡವನ್ನು ರಚಿಸಲಾಗಿದ್ದು, ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ಪಿಎಸ್‌ಐ ವಿನಾಯಕ ತೊರಗಲ್ ನೇತೃತ್ವದ ತಂಡವು ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿದೆ. 

ಆರೋಪಿತನು ಬಸ್ ನಿಲ್ದಾಣಗಳಲ್ಲಿ ಬೆಲೆಬಾಳುವ ವಸ್ತುಗಳಿರುವ ಬ್ಯಾಗ್‌ಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ರೂಢಿಗತ ಆರೋಪಿಯಾಗಿದ್ದು, ಒಟ್ಟು 11 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಬ್ಯಾಗ್ ಕಳ್ಳತನ ಹಾಗೂ ಮನೆ ಕಳ್ಳತನ ಪ್ರಕರಣಗಳು ದಾಖಲಾಗಿವೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


Ads on article

Advertise in articles 1

advertising articles 2

Advertise under the article