ಕೋಟ ಸಮುದಾಯ ಆರೋಗ್ಯ ಕೇಂದ್ರ ಕೆಳದರ್ಜೆಗಿಳಿಸುವ ಕ್ರಮಕ್ಕೆ ಜನಾಕ್ರೋಶ
ಉಡುಪಿ ಜಿಲ್ಲೆಯ ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆರಿಗೆ ತಜ್ಞರು ಸೇರಿದಂತೆ ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರಿಸುವ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಮಂಗಳವಾರ ಕೋಟದಲ್ಲಿ ಭಾರೀ ಜನಾಕ್ರೋಶ ವ್ಯಕ್ತವಾಯಿತು.
ಸಮುದಾಯ ಆರೋಗ್ಯ ಕೇಂದ್ರದ ಎದುರು ಕೋಟದ ಸಮಸ್ತ ನಾಗರಿಕರು ಬೃಹತ್ ಪ್ರತಿಭಟನೆ ನಡೆಸಿದರು.
ಕೋಟದ ಹಿರೇ ಮಹಾಲಿಂಗೇಶ್ವರ ದೇವಸ್ಥಾನದಿಂದ ಆರಂಭವಾದ ರ್ಯಾಲಿಗೆ ಕೋಟ ಗ್ರಾಮಪಂಚಾಯತ್ ಅಧ್ಯಕ್ಷೆ ಜ್ಯೋತಿ ಭರತ್ ಕುಮಾರ್ ಶೆಟ್ಟಿ ಚಾಲನೆ ನೀಡಿದರು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಈ ಆಸ್ಪತ್ರೆ ಗ್ರಾಮೀಣ ಜನರ ಜೀವನಾಡಿಯಾಗಿದ್ದು, ಸರ್ಕಾರದ ಈ ನಿರ್ಧಾರ ಜನಸಾಮಾನ್ಯರ ಆರೋಗ್ಯ ಸೇವೆಗೆ ಧಕ್ಕೆ ತರುವಂತಿದೆ. ಆದೇಶವನ್ನು ತಕ್ಷಣ ವಾಪಾಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ಸಭೆಯ ಸಂಯೋಜಕ ದಿನೇಶ್ ಗಾಣಿಗ ಮಾತನಾಡಿ, ಸಮುದಾಯ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿಗೊಳಿಸುವ ಬದಲು ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟಕ್ಕೆ ಇಳಿಸುವ ಸರ್ಕಾರದ ತಂತ್ರವನ್ನು ಖಂಡಿಸಿದರು. ಆದೇಶ ವಾಪಾಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಮೂರು ಗಂಟೆಗಳ ಬಳಿಕ ಸ್ಥಳಕ್ಕಾಗಮಿಸಿದ ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜು ಹುಬ್ಬಳ್ಳಿಯವರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಕ್ರಿಯಿಸಿದ ಡಿಎಚ್‌ಒ, ಸರ್ಕಾರದಿಂದ ಇನ್ನೂ ಯಾವುದೇ ಅಧಿಕೃತ ಆದೇಶ ಬಂದಿಲ್ಲ, ವೈದ್ಯರನ್ನು ಸ್ಥಳಾಂತರಿಸುವ ನಿರ್ಧಾರ ಅಂತಿಮವಾಗಿಲ್ಲ ಎಂದು ಸ್ಪಷ್ಟಪಡಿಸಿ, ಆಸ್ಪತ್ರೆಯ ಸೌಲಭ್ಯಗಳನ್ನು ಇನ್ನಷ್ಟು ಬಲಪಡಿಸುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು, ಪಂಚಾಯತ್ ಸದಸ್ಯರು, ಸಾಮಾಜಿಕ ಕಾರ್ಯಕರ್ತರು ಹಾಗೂ ನೂರಾರು ಸಾರ್ವಜನಿಕರು ಭಾಗವಹಿಸಿದ್ದರು.