ಅಂಕೋಲಾದಲ್ಲಿ ಸರಣಿ ಅಪಘಾತ; 8 ಮಂದಿ ಗಂಭೀರ; 24 ಮಂದಿಗೆ ಸಣ್ಣಪುಟ್ಟ ಗಾಯ
ಎರಡು ಖಾಸಗಿ ಬಸ್ ಹಾಗೂ ಲಾರಿಯ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿ 8 ಮಂದಿ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಸುಂಕಸಾಳ ಮೂಲೆಮನೆ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗುರುವಾರ ನಡೆದಿದೆ.
ಈ ದುರ್ಘಟನೆಯಲ್ಲಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದ 24 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಂಪಿಯಿAದ ಗೋವಾಕ್ಕೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಬಸ್, ಹುಬ್ಬಳ್ಳಿಯಿಂದ ಮಂಗಳೂರಿನತ್ತ ಸಾಗುತ್ತಿದ್ದ ಗಣೇಶ್ ಹೆಸರಿನ ಬಸ್ ಹಾಗೂ ಅಂಕೋಲಾ ಕಡೆಯಿಂದ ಯಲ್ಲಾಪುರಕ್ಕೆ ಚಲಿಸುತ್ತಿದ್ದ ಲಾರಿಯ ನಡುವೆ ಈ ಅಪಘಾತ ನಡೆದಿದೆ. ಢಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ ಮೂರೂ ವಾಹನಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸೀಬರ್ಡ್ ಬಸ್‌ನಲ್ಲಿ ಸುಮಾರು 12 ವಿದೇಶಿ ಪ್ರವಾಸಿಗರು ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಐವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಅಂಕೋಲಾದ ವಿವಿಧ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೂಡಲೇ ಭೇಟಿ ನೀಡಿದ ಅಂಕೋಲಾ ಪೊಲೀಸರು, ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯ ಕೈಗೊಂಡರು.
ಈ ಸರಣಿ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಶೇಷವಾಗಿ ಅರಬೈಲ್ ಘಟ್ಟ ಪ್ರದೇಶದಲ್ಲಿ ಸುಮಾರು ಐದು ಗಂಟೆಗಳ ಕಾಲ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಪ್ರಯಾಣಿಕರು ತೀವ್ರ ಸಂಕಷ್ಟ ಎದುರಿಸಿದರು. ಬಳಿಕ ಪೊಲೀಸರು ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.