ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ :ಕರಾವಳಿ ಶಾಸಕರು ಭಾಗಿ
Wednesday, February 04, 2026
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರ ರಾಜೀನಾಮೆ ಪಡೆಯುವಂತೆ ಆಗ್ರಹಿಸಿ ವಿಧಾನಸೌಧದಲ್ಲಿ ಪ್ರತಿಪಕ್ಷಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಸಲಾಯಿತು.
ಪ್ರತಿಪಕ್ಷ ನಾಯಕರಾದ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಈ ಧರಣಿಯಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರ ಜೊತೆ ಉಳಿದ ಶಾಸಕರು ಭಾಗವಹಿಸಿದರು.
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಚಿವರ ತಲೆದಂಡಕ್ಕೆ ಪಟ್ಟು ಹಿಡಿದು ಧರಣಿ ನಡೆಸಿದ ಪ್ರತಿಪಕ್ಷಗಳು, ತಕ್ಷಣವೇ ಸಚಿವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದವು.
ಈ ಅಹೋರಾತ್ರಿ ಧರಣಿಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು ಮತ್ತು ಸದಸ್ಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಭ್ರಷ್ಟಾಚಾರವನ್ನು ಮರೆಮಾಚಲು ಯತ್ನಿಸುತ್ತಿದೆ ಎಂದು ಆರೋಪಿಸಿ, ನ್ಯಾಯ ದೊರೆಯುವವರೆಗೂ ಹೋರಾಟ ಮುಂದುವರಿಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದರು.

