ಹೆಗ್ಗುಂಜಿ ಮಂದರ್ತಿಯಲ್ಲಿ ಹೊಸ ಸರ್ಕಾರಿ ಶಾಲೆ ಆರಂಭಕ್ಕೆ ಪ್ರಾಥಮಿಕ ಶಿಕ್ಷಣ ಸಚಿವರಿಗೆ ಮನವಿ
Saturday, February 07, 2026
ಕುಂದಾಪುರ ವಿಧಾನಸಭಾ ಕ್ಷೇತ್ರದ ಹೆಗ್ಗುಂಜಿ ಗ್ರಾಮದ ಮಂದರ್ತಿಯಲ್ಲಿ ಹೊಸ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆರಂಭಿಸುವಂತೆ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮಂದರ್ತಿಯಲ್ಲಿ ಈಗಿರುವ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಶಾಲೆ ಮುಚ್ಚುವ ಸಾಧ್ಯತೆ ಇದ್ದು, ಇದರಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗಲಿದೆ ಎಂದು ಶಾಸಕರು ಸಚಿವರ ಗಮನಕ್ಕೆ ತಂದರು. ಸರ್ಕಾರಿ ಶಾಲೆ ಆರಂಭವಾದರೆ ಬಡ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಶಾಲೆ ಆರಂಭಕ್ಕೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಮಂದರ್ತಿ ಶ್ರೀ ದುರ್ಗಪರಮೇಶ್ವರಿ ದೇವಸ್ಥಾನದ ಆಡಳಿತ ಮಂಡಳಿ ಒದಗಿಸುವುದಾಗಿ ಲಿಖಿತ ಭರವಸೆ ನೀಡಿದೆ. ಆದ್ದರಿಂದ 2026–27ನೇ ಶೈಕ್ಷಣಿಕ ವರ್ಷದಿಂದ ಹೆಗ್ಗುಂಜಿ ಗ್ರಾಮದ ಸರ್ವೆ ನಂ.167/71ಬಿ ಜಾಗದಲ್ಲಿ ಸರ್ಕಾರಿ ಶಾಲೆ ಆರಂಭಿಸಲು ಅನುಮತಿ ನೀಡುವಂತೆ ಸಚಿವರಲ್ಲಿ ವಿನಂತಿಸಿದರು.