ಅಬಕಾರಿ ಸಚಿವ ತಿಮ್ಮಾಪುರ್ ರಾಜೀನಾಮೆ ನೀಡಿ ತನಿಖೆ ಎದುರಿಸಲಿ: ಪ್ರತಾಪಸಿಂಹ ನಾಯಕ್ ವಾಗ್ದಾಳಿ
ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಬಕಾರಿ ಸಚಿವರ ರಕ್ಷಣೆಗೆ ಮುಖ್ಯಮಂತ್ರಿ ಹಾದಿಯಾಗಿ ಇಡೀ ಸಚಿವ ಸಂಪುಟ ನಿಂತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಆರೋಪಿಸಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಭ್ರಷ್ಟಾಚಾರದ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆಯನ್ನು ಎದುರಿಸಬೇಕು ಎಂದು ಆಗ್ರಹಿಸಿದರು.
ಅಬಕಾರಿ ಇಲಾಖೆಯ ಡಿಸಿಯ ಆಡಿಯೋ ಕ್ಲಿಪ್‌ನಲ್ಲಿ ಸಚಿವರಿಗೆ ಒಂದು ಕೋಟಿ ರೂಪಾಯಿ ಲಂಚ ನೀಡಬೇಕಿದೆ ಎಂಬ ಉಲ್ಲೇಖ ಸ್ಪಷ್ಟವಾಗಿ ಕೇಳಿಬರುತ್ತಿದೆ. ಇಂತಹ ಸಂದರ್ಭದಲ್ಲಿ ಸಚಿವರು ಸಾಕ್ಷಿ ಕೇಳುತ್ತಿರುವುದು ಹಾಸ್ಯಾಸ್ಪದವಾಗಿದೆ. ಭ್ರಷ್ಟಾಚಾರ ಮಾಡುವವರು ಸಾಕ್ಷಿಗಳನ್ನು ಸೃಷ್ಟಿಸಿ ಭ್ರಷ್ಟಾಚಾರ ಮಾಡುವುದಿಲ್ಲ ಎಂಬ ಸಾಮಾನ್ಯ ಜ್ಞಾನವೂ ಸಚಿವರಿಗೆ ಇಲ್ಲವೇ ಎಂದು ಅವರು ಪ್ರಶ್ನಿಸಿದರು.
ರಾಜ್ಯ ಸರ್ಕಾರದ ಭಂಡತನ ಮಿತಿ ಮೀರಿದೆ ಎಂದು ಟೀಕಿಸಿದ ಪ್ರತಾಪಸಿಂಹ ನಾಯಕ್, ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ನಾವು ಏನು ಮಾಡಿದರೂ ನಡೆಯುತ್ತದೆ ಎಂಬ ದುರ್ವತನೆಯೊಂದಿಗೆ ಸರ್ಕಾರ ವರ್ತಿಸುತ್ತಿದೆ ಎಂದರು. ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಅಧಿಕಾರಿಗಳ ಮೇಲೆ ದರ್ಪ ಮಿತಿಮೀರಿದೆ. ಜೊತೆಗೆ ಸರ್ಕಾರ ಹಿಂದೂ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂಬ ಆರೋಪವನ್ನೂ ಅವರು ಹೊರಿಸಿದರು.
ಸರಕಾರದ ಅವ್ಯವಹಾರ ಮತ್ತು ಅನಾಚಾರ ಮಿತಿ ಮೀರುತ್ತಿದ್ದು, ಜನತೆ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಕಾದು ಕುಳಿತಿದ್ದಾರೆ ಎಂದು ಹೇಳಿದರು. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಆ ಯೋಜನೆಗಳ ಸಮರ್ಪಕ ನಿರ್ವಹಣೆಯಲ್ಲೂ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.