ಕ್ಯಾನ್ಸರ್ ಬಗ್ಗೆ ಜನಜಾಗೃತಿಯಿಂದ ಆರಂಭಿಕ ಪತ್ತೆ ಸಾಧ್ಯ: ಶಾಸಕ ಯಶ್‌ಪಾಲ್ ಸುವರ್ಣ
Monday, February 09, 2026
ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದರೂ ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡಿದರೆ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಸಂಭವಿಸುವ ಸಾಧ್ಯತೆ ಹೆಚ್ಚಾಗಿದ್ದು, ರೋಗ ಹಾಗೂ ಚಿಕಿತ್ಸೆಯ ಕುರಿತು ಜನಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.
ಉಡುಪಿಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಉಡುಪಿ ಜಿಲ್ಲೆ ಆರೋಗ್ಯ ಸೇವೆಯಲ್ಲಿಯೂ ಇತರ ಜಿಲ್ಲೆಗಳಿಗೆ ಮಾದರಿಯಾಗಿದ್ದು, ವೈದ್ಯರು ಗುಣಮಟ್ಟದ ಸೇವೆ ನೀಡುವ ಮೂಲಕ ಜನಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ ಎಂದರು. ಪೋಷಕಾಂಶಯುಕ್ತ ಆಹಾರ, ನಿಯಮಿತ ವ್ಯಾಯಾಮ ಹಾಗೂ ಆರೋಗ್ಯ ತಪಾಸಣೆ ಅವಶ್ಯಕ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಎಂಸಿಎಚ್ ಆಸ್ಪತ್ರೆಯ ಸ್ತ್ರೀರೋಗ ತಜ್ಞೆ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ. ಅನಂತ ಎಸ್. ಮಠದ್ ವಿಶೇಷ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಕೀಮೋ ಚಿಕಿತ್ಸೆ ಪಡೆಯುತ್ತಿರುವ ಫಲಾನುಭವಿಗಳಿಗೆ ಆಹಾರ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದ ಬಳಿಕ ಜಿಲ್ಲಾ ಆಸ್ಪತ್ರೆಯಿಂದ ಬ್ರಹ್ಮಗಿರಿ ಸರ್ಕಲ್‌ವರೆಗೆ ಕ್ಯಾನ್ಸರ್ ಜಾಗೃತಿ ಜಾಥಾ ನಡೆಯಿತು. ಜಿಲ್ಲಾ ಸರ್ಜನ್ ಡಾ. ಹೆಚ್. ಅಶೋಕ್ ಬಲೂನ್ ಹಾರಿ ಬಿಡುವ ಮೂಲಕ ಜಾಥಾಕ್ಕೆ ಚಾಲನೆ ನೀಡಿದರು.
