10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪಶ್ಚಿಮ ಬಂಗಾಳದಲ್ಲಿ ಬಂಧನ
Wednesday, March 04, 2026
ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾದ ವರದಕ್ಷಿಣೆ ಪ್ರಕರಣದಲ್ಲಿ ಕಳೆದ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಶಶಿಕಾಂತ್ ಶೆಟ್ಟಿ (44) ಎಂದು ಗುರುತಿಸಲಾಗಿದೆ.
ದೀರ್ಘಕಾಲದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ವಿವಿಧ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದರು. ಖಚಿತ ಮಾಹಿತಿಯ ಮೇರೆಗೆ ಕುಂದಾಪುರ ಗ್ರಾಮಾಂತರ ಠಾಣೆಯ ತಂಡವು ಪಶ್ಚಿಮ ಬಂಗಾಳ ರಾಜ್ಯದ ಮುರ್ಷಿದಾಬಾದ್ ಜಿಲ್ಲೆಯ ಬನಿನಾಥಪುರಕ್ಕೆ ತೆರಳಿ ಆರೋಪಿಯನ್ನು ದಸ್ತಗಿರಿ ಮಾಡಿದೆ.
ಬಂಧಿತನನ್ನು ಕುಂದಾಪುರದ ಎ.ಸಿ.ಜೆ. ಹಾಗೂ ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ವಿಚಾರಣೆ ಬಳಿಕ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಪ್ರಸ್ತುತ ಆರೋಪಿಯನ್ನು ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಮುಂದುವರೆಸಿದ್ದಾರೆ.