ಕರಾವಳಿಯಲ್ಲಿ ಇಂದಿನಿಂದ ಮಾ. 23 ರವರೆಗೆ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
Wednesday, March 18, 2026
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾರ್ಚ್ 18 ರಿಂದ 23 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಧ್ಯಮ ಮಳೆಯಾಗಬಹುದು. ದಕ್ಷಿಣ ಒಳನಾಡಿನ ಬೆಂಗಳೂರು, ಮೈಸೂರು, ಕೊಡಗು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆ ಸುರಿಯುವ ಸಾಧ್ಯತೆಯಿದೆ. ಕಳೆದ ವಾರ 40 ಡಿಗ್ರಿ ಸೆಲ್ಸಿಯಸ್ ತಲುಪಿದ್ದ ಕಲಬುರ್ಗಿಯ ಗರಿಷ್ಠ ತಾಪಮಾನ ಮಂಗಳವಾರ 38 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಗುರುವಾರದಿಂದ ಕರಾವಳಿ ಮತ್ತು ಮಲೆನಾಡು ಭಾಗದ ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಮಂಡ್ಯ ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಕಂಡುಬರಲಿದೆ ಎಂದು ಇಲಾಖೆ ತಿಳಿಸಿದೆ.