ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭ
ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿದ್ದು, ಇಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ರ ವರೆಗೆ ಪರೀಕ್ಷೆ ನಡೆಯಲಿದೆ.
8,65,988 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 7,75,979 ವಿದ್ಯಾರ್ಥಿಗಳು ಹೊಸದಾಗಿ ಪರೀಕ್ಷೆ ಬರೆಯಲಿದ್ದಾರೆ. 62,938 ಪುನರಾವರ್ತಿತ ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. 2,870 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷೆಗಳು ಪ್ರಥಮ ಭಾಷಾ ವಿಷಯದಿಂದ ಆರಂಭವಾಗುತ್ತಿದ್ದು, ಕನ್ನಡ, ತೆಲುಗು, ತಮಿಳು, ಇಂಗ್ಲಿಷ್ ಮತ್ತು ಹಿಂದಿ ಭಾಷೆಗಳು ಒಳಗೊಂಡಿವೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದೆ.
ವಿದ್ಯಾರ್ಥಿಗಳು ನಿಗದಿತ ಡ್ರೆಸ್ ಕೋಡ್ ಪಾಲಿಸಬೇಕು ಹಾಗೂ ಪರೀಕ್ಷಾ ಸಮಯಕ್ಕಿಂತ ಅರ್ಧ ಗಂಟೆ ಮುಂಚಿತವಾಗಿ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಸೂಚನೆ ನೀಡಿದೆ. ಸರ್ಕಾರ ಹಾಲ್ ಟಿಕೆಟ್ ತೋರಿಸುವ ಮೂಲಕ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನೂ ವಿದ್ಯಾರ್ಥಿಗಳಿಗೆ ಕಲ್ಪಿಸಿದೆ.
ಪರೀಕ್ಷಾ ಪ್ರಕ್ರಿಯೆ ಪಾರದರ್ಶಕವಾಗಿರಲು, ಹಲವು ಜಿಲ್ಲೆಗಳಲ್ಲಿ ವೆಬ್‌ಸ್ಟ್ರೀಮಿಂಗ್ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳು ಮೇಲ್ವಿಚಾರಣೆ ನಡೆಸಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಇಯರ್‌ಫೋನ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳನ್ನು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಬಳಸುವುದು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮುಖ್ಯಾಧಿಕಾರಿಯೊಬ್ಬರ ಬಳಿ ಮಾತ್ರ ಕ್ಯಾಮೆರಾ ಇಲ್ಲದ ಸರಳ ಮೊಬೈಲ್ ಫೋನ್ ಬಳಸಲು ಅವಕಾಶ ನೀಡಲಾಗಿದೆ.