ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವೈಭವದ ರಥೋತ್ಸವ
Friday, March 13, 2026
ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವೈಭವದ ಬ್ರಹ್ಮರಥೋತ್ಸವ ಗುರುವಾರ ಭಕ್ತಿಭಾವದಿಂದ ನೆರವೇರಿತು. ಮೂಕಾಂಬಿಕಾ ದೇವಿಯ ವಿಜೃಂಭಣೆಯ ಉತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ಹೊರರಾಜ್ಯ ಮತ್ತು ವಿದೇಶಗಳಿಂದಲೂ ಆಗಮಿಸಿದ್ದ ಸಹಸ್ರಾರು ಭಕ್ತರು ಸಾಕ್ಷಿಯಾದರು.
ದೇಗುಲದ ಹಿರಿಯ ಅರ್ಚಕ ಕೆ.ಎನ್. ಗೋವಿಂದ ಅಡಿಗ ಅವರ ನೇತೃತ್ವದಲ್ಲಿ ರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ಮುಹೂರ್ತ ಬಲಿ, ಕ್ಷಿಪ್ರ ಬಲಿ ಹಾಗೂ ರಥ ಬಲಿಯ ಬಳಿಕ ಜೋಡಿ ಉತ್ಸವ ಮೂರ್ತಿಗಳನ್ನು ಗರ್ಭಗುಡಿಯಿಂದ ಹೊರತಂದು ದೇವಸ್ಥಾನದ ಸುತ್ತ ಪೌಳಿಯಲ್ಲಿ ಮೂರು ಸುತ್ತು ಉತ್ಸವ ನಡೆಸಲಾಯಿತು. ನಂತರ ಓಡು ಬಲಿ ಸೇವೆಗಾಗಿ ಉತ್ಸವ ಮೂರ್ತಿಗಳನ್ನು ಮೆರವಣಿಗೆಯ ಮೂಲಕ ಸೌಪರ್ಣಿಕ ನದಿ ತೀರಕ್ಕೆ ಕೊಂಡೊಯ್ಯಲಾಯಿತು.
ಕೊಲ್ಲೂರಿನ ರಥೋತ್ಸವದ ಪರಂಪರೆಯOತೆ ಗರ್ಭಗುಡಿಯಿಂದ ತರಲಾದ ಜೋಡಿ ಉತ್ಸವ ಮೂರ್ತಿಗಳನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥಪೂಜೆ ನೆರವೇರಿಸಲಾಯಿತು. ಸಾವಿರಾರು ಭಕ್ತರ ಜಯಘೋಷದ ನಡುವೆ ಬೀದಿ ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ರಥೋತ್ಸವ ನಡೆಯಿತು. ಸಂಜೆ ಐದು ಗಂಟೆಯ ಬಳಿಕ ದೇವರನ್ನು ಬ್ರಹ್ಮರಥದಲ್ಲಿ ಕುಳ್ಳಿರಿಸಿ ರಥಬೀದಿಯಲ್ಲಿ ಶಂಕರಾಶ್ರಮದವರೆಗೆ ರಥವನ್ನು ಎಳೆಯಲಾಯಿತು.
