ಕ್ಷಯರೋಗ ನಿರ್ಮೂಲನೆಗೆ ಸಮನ್ವಯ ಅಗತ್ಯ: ಮನು ಪಟೇಲ್ ಬಿ.ವೈ
Wednesday, March 25, 2026
ಕ್ಷಯರೋಗವು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಗಂಭೀರ ಸವಾಲಾಗಿ ಪರಿಣಮಿಸಿದ್ದು, ದೇಶದಲ್ಲಿ ಮರಣಕ್ಕೆ ಕಾರಣವಾಗುವ ಪ್ರಮುಖ ಕಾಯಿಲೆಗಳಲ್ಲಿ ಒಂದಾಗಿದೆ. ಈ ಹಿನ್ನೆಲೆಯಲ್ಲಿ ಕ್ಷಯರೋಗವನ್ನು ಶಾಶ್ವತವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಬಿ.ವೈ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯ ಶ್ರೀಕೃಷ್ಣ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಕ್ಷಯರೋಗ ದಿನಾಚರಣೆ ಹಾಗೂ ‘ಕ್ಷಯ ಮುಕ್ತ ಭಾರತ್’ 100 ದಿನಗಳ ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿಯೂ ಸೇರಿದಂತೆ ಎಲ್ಲಾ ಕಡೆಗಳಲ್ಲಿ ಕ್ಷಯರೋಗ ಕುರಿತು ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ. ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ದೂರಮಾಡಿ, ಹಂತಹಂತವಾಗಿ ಎಲ್ಲಾ ಗ್ರಾಮ ಪಂಚಾಯತ್‌ಗಳನ್ನು ಕ್ಷಯಮುಕ್ತವಾಗಿಸುವ ಗುರಿಯನ್ನು ಸಾಧಿಸಬೇಕು ಎಂದು ಹೇಳಿದರು.
ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಚಿದಾನಂದ ಸಂಜು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಈ ಸಾಲಿನ ಕ್ಷಯಮುಕ್ತ ಗ್ರಾಮ ಪಂಚಾಯತ್‌ಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು, 18 ಪಂಚಾಯತ್‌ಗಳಿಗೆ ಕಂಚು, 26 ಪಂಚಾಯತ್‌ಗಳಿಗೆ ಬೆಳ್ಳಿ ಹಾಗೂ 20 ಪಂಚಾಯತ್‌ಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
.jpeg)