ಅಡುಗೆ ಅನಿಲ ಕೊರತೆ ವಿರುದ್ಧ ಪ್ರತಿಭಟನೆ: ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ಅಡುಗೆ ಅನಿಲದ ಕೊರತೆ ಹಾಗೂ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿ ಅಜ್ಜರಕಾಡು ಪ್ರದೇಶದಲ್ಲಿ ಜನವಾದಿ ಮಹಿಳಾ ಸಂಘಟನೆ ಹಾಗೂ ಕಾರ್ಮಿಕ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಅಧ್ಯಕ್ಷೆ ಸರೋಜಾ, ಕೇಂದ್ರ ಸರ್ಕಾರ ಅಡುಗೆ ಅನಿಲದ ಕೊರತೆ ಇಲ್ಲವೆಂದು ಹೇಳಿದರೂ ಮನೆಗಳು ಹಾಗೂ ಹೋಟೆಲ್‌ಗಳಲ್ಲಿ ಅನಿಲ ಸಿಗದ ಪರಿಸ್ಥಿತಿ ನಿರ್ಮಾಣವಾಗಿರುವುದು ಖಂಡನೀಯ ಎಂದು ಹೇಳಿದರು. ಸಂಕಷ್ಟದ ಸಮಯದಲ್ಲಿಯೇ ಅನಿಲದ ಬೆಲೆ ಏರಿಕೆ ಮಾಡಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದು ಆರೋಪಿಸಿದರು.
ಸಿಐಟಿಯು ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಮಾತನಾಡಿ, ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧಗಳಿಂದ ಸಾಮಾನ್ಯ ಜನತೆ ಸಂಕಷ್ಟ ಅನುಭವಿಸುತ್ತಿದ್ದು, ಇದರ ಪರಿಣಾಮವಾಗಿ ಅಗತ್ಯ ವಸ್ತುಗಳ ಕೊರತೆ ಹೆಚ್ಚಾಗಿದೆ ಎಂದು ಹೇಳಿದರು. ಯುದ್ಧ ವಿರೋಧಿ ಧ್ವನಿಗಳು ವಿಶ್ವದಾದ್ಯಂತ ಕೇಳಿಬರುತ್ತಿರುವುದನ್ನೂ ಅವರು ಉಲ್ಲೇಖಿಸಿದರು.
ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಸಿಐಟಿಯು ಜಿಲ್ಲಾ ಅಧ್ಯಕ್ಷ ಶಶಿಧರ ಗೊಲ್ಲ, ಕೋಶಾಧಿಕಾರಿ ಕವಿರಾಜ್ ಎಸ್ ಕಾಂಚನ್ ಹಾಗೂ ಇತರರು ಭಾಗವಹಿಸಿದ್ದರು.ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೀಲಾವತಿ, ಬಲ್ಕೀಸ್, ಶಶಿಕಲಾ, ನಳಿನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರತಿಭಟನಾಕಾರರು ಒಲೆಯಲ್ಲಿ ಕಾಫಿ ತಯಾರಿಸಿ ಕುಡಿಯುವ ಮೂಲಕ ವಿನೂತನವಾಗಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.