ರಾಷ್ಟ್ರೀಯ ಜನಗಣತಿ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮವಹಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ
Friday, March 06, 2026
ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ನಡೆಯಲಿರುವ 2027ರ ರಾಷ್ಟ್ರೀಯ ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚಿಸಿದರು.
ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ 2027ರ ಜನಗಣತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನಗಣತಿ ಪ್ರಕ್ರಿಯೆ ಈ ಬಾರಿ ಸಂಪೂರ್ಣ ಡಿಜಿಟಲ್ ಮಾದರಿಯಲ್ಲಿ ನಡೆಯಲಿದ್ದು, ನಾಗರಿಕರಿಗೆ ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿರುತ್ತದೆ. ಮೊದಲ ಹಂತದಲ್ಲಿ ಏಪ್ರಿಲ್ 16ರಿಂದ 30 ದಿನಗಳ ಕಾಲ ಮನೆ ಪಟ್ಟಿ (ಹೌಸ್ ಲಿಸ್ಟಿಂಗ್) ಕಾರ್ಯ ನಡೆಯಲಿದೆ. ಎರಡನೇ ಹಂತದಲ್ಲಿ ಜನಸಂಖ್ಯೆ ಎಣಿಕೆ ಕಾರ್ಯವು 2027ರ ಫೆಬ್ರವರಿಯಿಂದ ಆರಂಭವಾಗಲಿದೆ ಎಂದು ಅವರು ತಿಳಿಸಿದರು.
ಸರ್ಕಾರದ ಮಾರ್ಗಸೂಚಿಯಂತೆ ಗಣತಿ ಕಾರ್ಯಗಳಿಗೆ ಅಗತ್ಯವಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು. ಮನೆಗಳ ಪಟ್ಟಿ ತಯಾರಿ, ದತ್ತಾಂಶ ಸಂಗ್ರಹಣೆ, ಪರಿಶೀಲನೆ ಹಾಗೂ ಮೇಲ್ವಿಚಾರಣೆ ಕಾರ್ಯಗಳಿಗೆ ಮೊಬೈಲ್ ಅಪ್ಲಿಕೇಶನ್ ಮತ್ತು ಕೇಂದ್ರ ಪೋರ್ಟಲ್ ಬಳಸಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಉದಯಕುಮಾರ್ ಶೆಟ್ಟಿ, ಸಹಾಯಕ ಆಯುಕ್ತೆ ರಶ್ಮಿ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

