ನವವಿವಾಹಿತ, ಯುವ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ
Monday, March 30, 2026
ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಭಾನುವಾರ (ಮಾ.29) ನಡೆದಿದೆ.
ಬೆಳ್ತಂಗಡಿಯ ಲಾಯಿಲ ಗ್ರಾಮದ ಕರ್ನೋಡಿಯಲ್ಲಿ ಅಜ್ಜನ ಮನೆಯಲ್ಲಿ ವಾಸವಾಗಿದ್ದ ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (36 ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಾ.17 ರಂದು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಸುದೀಪ್ ರೈ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕೆಲಸದಲ್ಲಿದ್ದ, ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಜೊತೆ ಮನೆಯವರಿಗೆ ತಿಳಿಸದೆ ಫೆ.17 ರಂದು ವಿವಾಹ ನೋಂದಣಿ ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಪತ್ನಿಯ ಮನೆಯಲ್ಲಿ ಮಾ.17ರಂದು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.