ಉಪ್ಪುಂದ ಮೀನುಗಾರರ ಸಹಕಾರ ಸಂಘಕ್ಕೆ 80.91 ಲಕ್ಷ ರೂ. ವಂಚನೆ
Wednesday, April 08, 2026
ಉಪ್ಪುಂದದ ಕರಾವಳಿ ಸಾಂಪ್ರದಾಯಿಕ ಮೀನುಗಾರರ ಸಹಕಾರ ಸಂಘದಲ್ಲಿ ಸುಮಾರು 80.91 ಲಕ್ಷ ರೂಪಾಯಿ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸಂಘದ ಇಬ್ಬರು ಮಾಜಿ ಅಧಿಕಾರಿಗಳ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂಘದ ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ ಕೆ. ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ಖಾಸಗಿ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ಸಂಘದ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಭಾಶ್ಚಂದ್ರ (39) ಮತ್ತು ಮಾಜಿ ಪ್ರಧಾನ ವ್ಯವಸ್ಥಾಪಕ ದೀಪಕ್ ಕುಮಾರ್ (35) ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ಈ ವಂಚನೆ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
2023-24ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯ ವೇಳೆ ಒಟ್ಟು 80,91,996 ರೂಪಾಯಿ ಹಣವು ಸಂಘದ ಖಾತೆಯಿಂದ ದುರುಪಯೋಗವಾಗಿರುವುದು ಪತ್ತೆಯಾಗಿದೆ. ಆರೋಪಿಗಳು ಈ ಹಣವನ್ನು ತಮ್ಮ ಸ್ವಂತ ಉದ್ದೇಶಕ್ಕೆ ಬಳಸಿಕೊಂಡು ಸಂಘಕ್ಕೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಬೈಂದೂರು ಪೊಲೀಸರು ಬಿಎನ್‌ಎಸ್ ಕಾಯ್ದೆಯ ವಿವಿಧ ಕಲಂ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.