ರಾಜ್ಯದಲ್ಲಿ ತಾಪಮಾನ ಏರಿಕೆ: ಹೀಟ್ ವೇವ್ ಎಚ್ಚರಿಕೆ
ರಾಜ್ಯದಲ್ಲಿ ಏಪ್ರಿಲ್ 25 ರಂದು ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಹವಾಮಾನ ಇಲಾಖೆಯ ಪ್ರಕಾರ, ಉತ್ತರ ಒಳನಾಡಿನ ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದ್ದು, ಈ ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಹಾಗೂ ರೈತರು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲು ಕೋರಲಾಗಿದೆ. ಇದೇ ವೇಳೆ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿಯೂ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.ಮತ್ತೊಂದೆಡೆ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಬಿಸಿ ಗಾಳಿ (ಹೀಟ್ ವೇವ್) ಆರ್ಭಟ ಹೆಚ್ಚಾಗಿದ್ದು, ಮುಂದಿನ ಐದು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಹೆಚ್ಚುತ್ತಿರುವ ಹೀಟ್ ಸ್ಟ್ರೋಕ್ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಆರೋಗ್ಯ ಇಲಾಖೆಯು ತುರ್ತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಮಧ್ಯಾಹ್ನ 12 ರಿಂದ ಸಂಜೆ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ತಪ್ಪಿಸುವಂತೆ ಮತ್ತು ಅನಿವಾರ್ಯ ಕೆಲಸವಿಲ್ಲದೆ ಮನೆಯಿಂದ ಹೊರಬರದಂತೆ ವೈದ್ಯರು ಸಲಹೆ ನೀಡಿದ್ದಾರೆ. ದೇಹದ ಉಷ್ಣತೆಯನ್ನು ಕಾಪಾಡಿಕೊಳ್ಳಲು ನಿಯಮಿತವಾಗಿ ನೀರು, ಮಜ್ಜಿಗೆ, ಎಳನೀರು ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಬೇಕು ಹಾಗೂ ನಿರ್ಜಲೀಕರಣಕ್ಕೆ ಕಾರಣವಾಗುವ ಕಾಫಿ, ಟೀ ಮತ್ತು ಸಕ್ಕರೆಯುಕ್ತ ಪಾನೀಯಗಳ ಸೇವನೆಯನ್ನು ಕಡಿಮೆ ಮಾಡಬೇಕು ಎಂದು ಸೂಚಿಸಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಿನಲ್ಲಿ ಆಟವಾಡದಂತೆ ಪೋಷಕರು ನಿಗಾವಹಿಸಬೇಕು ಮತ್ತು ಸಾರ್ವಜನಿಕರು ಹೊರಗೆ ಹೋಗುವಾಗ ಹಗುರವಾದ ಹತ್ತಿ ಬಟ್ಟೆ, ಛತ್ರಿ ಅಥವಾ ಟೋಪಿಗಳನ್ನು ಬಳಸುವುದನ್ನು ಮರೆಯಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.