-->
ಡಿ.ಜಿ.ಪಿ ಡಾ. ಎಂ.ಎ ಸಲೀಂ ಉಡುಪಿ ಭೇಟಿ: ಪೊಲೀಸ್ ಕಾರ್ಯಕ್ಷಮತೆಗೆ ಮೆಚ್ಚುಗೆ

ಡಿ.ಜಿ.ಪಿ ಡಾ. ಎಂ.ಎ ಸಲೀಂ ಉಡುಪಿ ಭೇಟಿ: ಪೊಲೀಸ್ ಕಾರ್ಯಕ್ಷಮತೆಗೆ ಮೆಚ್ಚುಗೆ


ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ ಸಲೀಂ ಉಡುಪಿ ಜಿಲ್ಲೆಗೆ ಭೇಟಿ ನೀಡಿ ಕರಾವಳಿ ಕಾವಲು ಪಡೆ, ಮಲ್ಪೆ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.


ಮಲ್ಪೆಯ ಕರಾವಳಿ ಕಾವಲು ಪಡೆಯ ಪರಿವೀಕ್ಷಣೆ ವೇಳೆ , ಪೊಲೀಸ್ ಮಹಾನಿರೀಕ್ಷಕರು, ಮಂಗಳೂರು ಪಶ್ಚಿಮ ವಲಯ ಹಾಗೂ ಕರಾವಳಿ ಕಾವಲು ಪಡೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಸಭೆಯಲ್ಲಿ ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕಾಪಾಡಲು ಕೈಗೊಂಡ ಕ್ರಮಗಳನ್ನು ಡಿಜಿಪಿ ಶ್ಲಾಘಿಸಿ, ಅದೇ ರೀತಿಯಲ್ಲಿ ಮುಂದುವರಿಸಬೇಕು ಎಂದು ಸೂಚಿಸಿದರು. ರೌಡಿ ಚಟುವಟಿಕೆಗಳು ಹಾಗೂ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.


ಸೊತ್ತು ಕಳವು ಪ್ರಕರಣಗಳನ್ನು ಪತ್ತೆಹಚ್ಚುವುದರ ಜೊತೆಗೆ ತಡೆಗಟ್ಟುವ ಕ್ರಮಗಳನ್ನು ಬಲಪಡಿಸಬೇಕು. ಅಪರಾಧ ಪ್ರಕರಣಗಳನ್ನು ಕಾಲಮಿತಿಯೊಳಗೆ ಇತ್ಯರ್ಥಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಆಸರೆ ಕಾರ್ಯಕ್ರಮವನ್ನು ತಾವು ಉಡುಪಿ ಜಿಲ್ಲಾ ಎಸ್‌ಪಿ ಆಗಿದ್ದ ಸಂದರ್ಭದಲ್ಲಿ ಪರಿಚಯಿಸಿದ್ದು, ಈಗ ರಾಜ್ಯಾದ್ಯಂತ ಅನುಷ್ಠಾನಗೊಳ್ಳುತ್ತಿರುವುದಾಗಿ ತಿಳಿಸಿದರು. ಉಡುಪಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಸಮುದಾಯ ಪೊಲೀಸ್ ಕಾರ್ಯಕ್ರಮಗಳಾದ ಮನೆ-ಮನೆಗೆ ಪೊಲೀಸ್, ಸ್ಪಂದನ ಹಾಗೂ ಮಕ್ಕಳ ಸಹಾಯವಾಣಿ ಸೇವೆಗಳನ್ನು ಮತ್ತಷ್ಟು ಬಲಪಡಿಸಲು ಸೂಚಿಸಿದರು.

ಉಡುಪಿ ಜಿಲ್ಲೆಯ ನಾಗರಿಕರು ಸುಶಿಕ್ಷಿತರು ಹಾಗೂ ಶಾಂತಿಪ್ರಿಯರಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವಂತೆ, ಪೊಲೀಸ್ ಇಲಾಖೆಯೂ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಮಾದರಿಯಾಗುವಂತೆ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ನಂತರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ವಲಯ ಪೊಲೀಸ್ ಮಹಾನಿರೀಕ್ಷಕರು ಅಮಿತ್ ಸಿಂಗ್, ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ , ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸೇರಿದಂತೆ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಭಾಗವಹಿಸಿದರು.

ಸಭೆಯ ಆರಂಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್. ನಾಯ್ಕ್ ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

Ads on article

Advertise in articles 1

advertising articles 2

Advertise under the article