ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಓರ್ವನ ಬಂಧನ
ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವೊಂದನ್ನು ಕೋಟ ಪೊಲೀಸರು ಪತ್ತೆಹಚ್ಚಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು (ತನಿಖೆ) ಮಹಾಂತೇಶ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. ಬ್ರಹ್ಮಾವರ ತಾಲೂಕು ಮಣೂರು ಗ್ರಾಮದ ಬಾಳೆಬೆಟ್ಟು ಬಸ್ ನಿಲ್ದಾಣದ ಸಮೀಪದಲ್ಲಿ ಕೆಲವರು ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭಿಸಿತ್ತು.
ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತೆರಳಿ ಮರೆಯಲ್ಲಿ ನಿಂತು ನಿಗಾ ವಹಿಸಿದರು. ಈ ವೇಳೆ ಬಸ್ ನಿಲ್ದಾಣದ ಎದುರು ನಿಂತಿದ್ದ ವ್ಯಕ್ತಿಯೊಬ್ಬನು ಮೊಬೈಲ್ ಮೂಲಕ ಸಂಪರ್ಕದಲ್ಲಿದ್ದು, “KKR” ಹಾಗೂ “SRH” ತಂಡಗಳ ಹೆಸರನ್ನು ಉಲ್ಲೇಖಿಸುತ್ತಾ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಬಾಜಿ ಕಟ್ಟುತ್ತಿರುವುದು ಗಮನಕ್ಕೆ ಬಂದಿದೆ.
ತಕ್ಷಣವೇ ಪೊಲೀಸರು ಕ್ರಮ ಕೈಗೊಂಡು ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತನು ಬೇಳೂರು ಗ್ರಾಮದ ಆದಿತ್ಯ ಶೆಟ್ಟಿ (28) ಎಂಬುದು ತಿಳಿದುಬಂದಿದೆ.
ಪರಿಶೀಲನೆ ವೇಳೆ, ಈ ಬೆಟ್ಟಿಂಗ್ ಚಟುವಟಿಕೆ ಐಪಿಎಲ್ ಟಿ20 ಪಂದ್ಯದಲ್ಲಿ ಕೊಲ್ಕತ್ತಾ Knight Riders ಮತ್ತು Sunrisers Hyderabad ತಂಡಗಳ ನಡುವೆ ಈಡೇನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯಕ್ಕೆ ಸಂಬಂಧಿಸಿದೆ ಎಂಬುದು ಬಹಿರಂಗವಾಗಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟು ಆರೋಪಿಗಳು ಈ ದಂಧೆಯಲ್ಲಿ ಭಾಗಿಯಾಗಿರುವ ಸಾಧ್ಯತೆ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.