ಮಂಗಳೂರಿನ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್ ಮನೆ ಮೇಲೆ ಲೋಕಾ ದಾಳಿ
Wednesday, April 08, 2026
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಪ್ರಾದೇಶಿಕ ಉಪ ಔಷಧ ನಿಯಂತ್ರಕರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ಬಾಬು ಬಿ.ಎನ್. ಅವರ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಈ ವೇಳೆ ಸುಮಾರು 3,37,04,000 ರೂಪಾಯಿ ಮೌಲ್ಯದ ಅಕ್ರಮ ಸ್ಥಿರ ಮತ್ತು ಚರಾಸ್ತಿಗಳು ಪತ್ತೆಯಾಗಿವೆ.
ಪೊಲೀಸ್ ನಿರೀಕ್ಷಕ ಚಂದ್ರಶೇಖರ್ ಕೆ.ಎನ್. ಅವರು ನೀಡಿದ ವರದಿ ಆಧರಿಸಿ ಏಪ್ರಿಲ್ 6ರಂದು ಮಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಮಂಗಳೂರು ಲೋಕಾಯುಕ್ತ ಎಸ್‌ಪಿ ಬಿ.ಪಿ. ದಿನೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ಮುಂಜಾನೆ 6 ತಂಡಗಳು ಬಾಬು ಅವರ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿರುವ ವಾಸದ ಮನೆ, ವಾಣಿಜ್ಯ ಮಳಿಗೆಗಳು, ಬೆಂಗಳೂರಿನಲ್ಲಿರುವ ಫ್ಲಾಟ್ ಹಾಗೂ ಮಂಗಳೂರಿನ ವಾಸದ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿವೆ.ಬೆಂಗಳೂರಿನ ನಿವಾಸದಲ್ಲಿ 23.64 ಲಕ್ಷ ರೂಪಾಯಿ ನಗದು ಸೇರಿದಂತೆ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯಲ್ಲಿ ಡಿವೈಎಸ್‌ಪಿಗಳಾದ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಹಾಗೂ ವಿವಿಧ ಜಿಲ್ಲೆಗಳ ಲೋಕಾಯುಕ್ತ ಸಿಬ್ಬಂದಿ ಭಾಗವಹಿಸಿದ್ದರು. ಸದ್ಯ ತನಿಖೆ ಮುಂದುವರಿದಿದೆ.
