ಕಲ್ಯಾಣಪುರ ಚರ್ಚ್ ನಲ್ಲಿ ಕ್ರೈಸ್ತರಿಂದ ‘ಪವಿತ್ರ ಗುರುವಾರ’ ಆಚರಣೆ
Thursday, April 02, 2026
ಯೇಸು ಕ್ರಿಸ್ತರು ತನ್ನ ಶಿಷ್ಯರ ಜತೆ ನಡೆಸಿದ ಕೊನೆಯ ಭೋಜನ ಹಾಗೂ ಕ್ರೈಸ್ತ ಧರ್ಮ ಸಭೆಯ ಉಗಮದ ನೆನಪನ್ನು ಸಾರುವ ಪವಿತ್ರ ಗುರುವಾರ(ಮೊಂಡಿ ಥರ್ಸ್ಡೇ)ಯನ್ನು ಉಡುಪಿ ಜಿಲ್ಲೆಯಾದ್ಯಂತ ಕ್ರೈಸ್ತರು ಶ್ರದ್ಧೆ, ಭಕ್ತಿಯಿಂದ ಆಚರಿಸಿದರು.
ಉಡುಪಿ ಧರ್ಮಪ್ರಾಂತ್ಯದ ಪ್ರಧಾನ ಧಾರ್ಮಿಕ ಕಾರ್ಯಕ್ರಮವು ಕಲ್ಯಾಣಪುರ ಮಿಲಾಗ್ರಿಸ್ ಕೆಥೆಡ್ರಲ್ನಲ್ಲಿ ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಜರಗಿತು. ಧರ್ಮಾಧ್ಯಕ್ಷರು 12 ಮಂದಿ ಪ್ರೆಷಿತರ ಪಾದಗಳನ್ನು ತೊಳೆಯುವ ಮೂಲಕ ಏಸುಕ್ರಿಸ್ತರು ಸಾರಿದ ದೀನತೆ ಹಾಗೂ ಪ್ರೀತಿಯ ಸಂದೇಶವನ್ನು ನೀಡಿದರು.
ಈ ಸಂದರ್ಭದಲ್ಲಿ ಕ್ಯಾಥೆಡ್ರಲಿನ ಪ್ರಧಾನ ಧರ್ಮಗುರು ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರು ಪ್ರದೀಪ್ ಕಾರ್ಡೋಜಾ, ಧರ್ಮಪ್ರಾಂತ್ಯದ ಸಂಪದ ಸಂಸ್ಥೆಯ ನಿರ್ದೇಶಕ|ರೆಜಿನಾಲ್ಡ್ ಪಿಂಟೊ ಮೊದಲಾದವರು ಉಪಸ್ಥಿತರಿದ್ದರು.
ಪವಿತ್ರ ಗುರುವಾರದ ಅಂಗವಾಗಿ ಚರ್ಚ್ಗಳಲ್ಲಿ ಪರಮ ಪ್ರಸಾದ ಸಂಸ್ಕಾರ, ಗುರು ದೀಕ್ಷೆಯ ಸಂಸ್ಕಾರ, ಸೇವೆಯ ಸಂಸ್ಕಾರದ ಸ್ಮರಣೆಯೊಂದಿಗೆ ವಿಶೇಷ ಪ್ರಾರ್ಥನೆ, ಬಲಿಪೂಜೆ, ಆರಾಧನೆಗಳು ಜರುಗಿದವು. ಪವಿತ್ರ ಗುರುವಾರದ ಬಳಿಕ ಶುಕ್ರವಾರದಂದು ಯೇಸು ಸ್ವಾಮಿಯನ್ನು ಶಿಲುಬೆಗೇರಿಸಿದ್ದು ಶುಕ್ರವಾರವನ್ನು ಕ್ರೈಸ್ತರು ಶುಭ ಶುಕ್ರವಾರವಾಗಿ ಆಚರಿಸಿ ಧ್ಯಾನ, ಉಪವಾಸ ಹಾಗೂ ಯೇಸುವಿನ ಶಿಲುಬೆಯ ಹಾದಿಯನ್ನು ನೆರವೇರಿಸುವ ಮೂಲಕ ಆಚರಿಸಲಿದ್ದಾರೆ.
