ಭಟ್ಕಳ ಮೂರಿನಕಟ್ಟೆ ವಿವಾದ: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಮೂರಿನಕಟ್ಟೆ ಮರುನಿರ್ಮಾಣ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿದೆ. ಮೇ 25ರಿಂದ 27ರವರೆಗೆ ಭಟ್ಕಳ ಪಟ್ಟಣ ಮತ್ತು ಜಾಲಿ ಪಂಚಾಯತ್ ವ್ಯಾಪ್ತಿಯಲ್ಲಿ ಐದು ಮಂದಿ ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಿ ಭಟ್ಕಳ ಎಸಿ ಆದೇಶ ಹೊರಡಿಸಿದ್ದಾರೆ.
ನಗರದಲ್ಲಿ ಉದ್ವಿಗ್ನ ವಾತಾವರಣ ಮುಂದುವರಿದಿರುವುದರಿಂದ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಪ್ರಮುಖ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಮಂಗಳೂರು ವಲಯ ಐಜಿಪಿ ಅಮಿತ್ ಸಿಂಗ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿಯ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.
ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿಯ ವೇಳೆ ತೆರವುಗೊಳಿಸಲಾಗಿದ್ದ ಮೂರಿನಕಟ್ಟೆಯನ್ನು, ಕಾಮಗಾರಿ ಪೂರ್ಣಗೊಂಡ ನಂತರ ಅದೇ ಸ್ಥಳದಲ್ಲಿ ಕೆಲ ಹಿಂದೂ ಕಾರ್ಯಕರ್ತರು ಮರುನಿರ್ಮಾಣ ಮಾಡಿದ್ದರು. ಈ ಕ್ರಮಕ್ಕೆ ಮುಸ್ಲಿಂ ಸಮುದಾಯದ ಮುಖಂಡರು ಹಾಗೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿ, ಕಟ್ಟೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿದ್ದರು.
ಭಾನುವಾರ ನೂರಾರು ಮಂದಿ ಮುಸ್ಲಿಂ ಸಮುದಾಯದವರು ಮೂರಿನಕಟ್ಟೆ ಸ್ಥಳದ ಬಳಿ ಜಮಾಯಿಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತು. ಮರುನಿರ್ಮಾಣಗೊಂಡಿದ್ದ ಕಟ್ಟೆಯನ್ನು ತೆರವುಗೊಳಿಸಲು ಕೆಲವರು ಮುಂದಾದಾಗ ಪೊಲೀಸರು ಮಧ್ಯಪ್ರವೇಶಿಸಿ ತಡೆಯಲು ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಘರ್ಷಣೆ ಸಂಭವಿಸಿದ್ದು, ಪರಿಸ್ಥಿತಿ ನಿಯಂತ್ರಣ ತಪ್ಪುವ ಲಕ್ಷಣ ಕಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿಚಾರ್ಜ್ ನಡೆಸಿದರು.
ಈ ಘಟನೆಯನ್ನು ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಟ್ಕಳ ಪೊಲೀಸ್ ಠಾಣೆ ಹಾಗೂ ಪೊಲೀಸ್ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪೊಲೀಸರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇದೇ ವೇಳೆ ವಿವಾದಿತ ಸ್ಥಳದಲ್ಲೇ ಮೂರಿನಕಟ್ಟೆ ನಿರ್ಮಾಣ ಮುಂದುವರಿಸಲು ಕೆಲ ಕಾರ್ಯಕರ್ತರು ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು ಮತ್ತೊಮ್ಮೆ ಮಧ್ಯಪ್ರವೇಶಿಸಿ, ಪರಿಸ್ಥಿತಿ ಹದಗೆಡದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.