ಖಾರ್ವಿಕೇರಿ ಸುಡುಗಾಡ ತೋಡಿನ ಸಮಗ್ರ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಿ: ಶಾಸಕ ಕಿರಣ್ ಕೊಡ್ಗಿ
Friday, May 22, 2026
ಕುಂದಾಪುರ ಪುರಸಭಾ ವ್ಯಾಪ್ತಿಯ ಖಾರ್ವಿಕೇರಿ ಸುಡುಗಾಡ ತೋಡಿನ ಸಮಗ್ರ ಅಭಿವೃದ್ಧಿ ಕುರಿತಂತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಶುಕ್ರವಾರ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪರಿಶೀಲನೆಯ ವೇಳೆ ತೋಡಿನಲ್ಲಿ ಹೂಳು ತುಂಬಿಕೊಂಡಿರುವುದರಿಂದ ನೀರಿನ ಸರಾಗ ಹರಿವಿಗೆ ತೊಂದರೆಯಾಗುತ್ತಿರುವುದನ್ನು ಗಮನಿಸಿದ ಶಾಸಕರು, ತಕ್ಷಣವೇ ಹೂಳೆತ್ತುವ ಕಾಮಗಾರಿಯನ್ನು ಕೈಗೆತ್ತಿಕೊಂಡು ಅಗತ್ಯ ಕ್ರಮಗಳನ್ನು ಜರುಗಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ತೋಡಿನ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ಯೋಜನೆ ರೂಪಿಸಿ, ಅನುದಾನ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಪುರಸಭೆ ಮುಖ್ಯಾಧಿಕಾರಿಗೆ ನಿರ್ದೇಶನ ನೀಡಿದರು. ಜೊತೆಗೆ ಸಣ್ಣ ನೀರಾವರಿ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದೊಂದಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಕುರಿತು ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ, ಪುರಸಭಾ ಎಂಜಿನಿಯರ್, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

