ನಾಳೆ ರಾಜ್ಯಪಾಲರ ಸಮಯ ಕೋರಿದ ಸಿದ್ದರಾಮಯ್ಯ: ರಾಜೀನಾಮೆ ಪತ್ರ ಸಲ್ಲಿಕೆ ಸಾಧ್ಯತೆ
Wednesday, May 27, 2026
ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ನಾಳೆ ಬೆಳಗ್ಗೆ 10.30 ರಾಜ್ಯಪಾಲರನ್ನು ಭೇಟಿಯಾಗಲು ಸಿದ್ದರಾಮಯ್ಯ ಅವರು ಸಮಯಾವಕಾಶ ಕೋರಿದ್ದಾರೆ.
ರಾಜೀನಾಮೆ ನೀಡುವ ಮುನ್ನ ಮುಖ್ಯಮಂತ್ರಿಗಳು ತಮ್ಮ ಆಪ್ತರು ಹಾಗೂ ಸಂಪುಟದ ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ (ಗುರುವಾರ) ಮುಂಜಾನೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಚಿವ ಸಂಪುಟದ ಸದಸ್ಯರಿಗಾಗಿ ವಿಶೇಷ ಉಪಹಾರಕೂಟವನ್ನು ಆಯೋಜಿಸಿದ್ದಾರೆ. ಈ ಸಭೆಯಲ್ಲಿ ಅವರು ತಮ್ಮ ನಿರ್ಧಾರದ ಹಿಂದಿನ ಕಾರಣಗಳನ್ನು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಉಪಹಾರಕೂಟದ ಬೆನ್ನಲ್ಲೇ ಮುಖ್ಯಮಂತ್ರಿಗಳು ರಾಜಭವನಕ್ಕೆ ತೆರಳಲು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ರಾಜ್ಯಪಾಲರನ್ನು ಭೇಟಿಯಾಗಲು ಸಿಎಂ ಕಚೇರಿಯಿಂದ ಈಗಾಗಲೇ ಸಮಯಾವಕಾಶ ಕೋರಲಾಗಿದೆ. ಈ ಭೇಟಿಯ ವೇಳೆ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನದ ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಅಧಿಕೃತವಾಗಿ ಹಸ್ತಾಂತರಿಸುವ ಸಾಧ್ಯತೆಗಳಿವೆ.