ಉಡುಪಿ ನಗರ ಮಹಿಳಾ ಠಾಣೆ ಬೇರೆಡೆಗೆ ಸ್ಥಳಾಂತರ: ಡಾ. ನಾಗಲಕ್ಷ್ಮಿ ಚೌಧರಿ ಸೂಚನೆ
ಉಡುಪಿ ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸ್ಥಳಾವಕಾಶದ ಕೊರತೆ ಇದ್ದು, ಠಾಣೆಯನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಸೂಚಿಸಿರುವುದಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ತಿಳಿಸಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಉಡುಪಿ ನಗರ ಮಹಿಳಾ ಠಾಣೆಯ ನಿರೀಕ್ಷಕರು ಹಾಗು ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದಾರೆ. ಆದರೆ ಠಾಣೆಗೆ ಬರುವವರಿಗೆ ಕುಳಿತುಕೊಳ್ಳಲು ಸರಿಯಾದ ಸ್ಥಳಾವಕಾಶದ ಕೊರತೆ ಇದೆ. ಹೀಗಾಗಿ ಮಹಿಳಾ ಠಾಣೆಯನ್ನು ಬೇರೆಡೆಗೆ ಸ್ಥಳಾಂತರಿಸಲು ಸೂಚಿಸಿರುವುದಾಗಿ ತಿಳಿಸಿದರು.
ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ವಿದೇಶಿ ಮಾದರಿಯಲ್ಲಿ ನಿರ್ಮಿಸಲಾಗಿದ್ದು, ಇದರಿಂದ ಇದರ ನಿರ್ವಹಣೆ ತುಂಬಾ ಕಷ್ಟವಾಗಿದೆ. ವಿದ್ಯುತ್ ಕೈಕೊಟ್ಟರೆ ಜನರೇಟರ್‌ಗೆ ಗಂಟೆಗೆ 50 ಲೀಟರ್ ಡಿಸೇಲ್ ಹಾಕಬೇಕು. ಈ ವಿಚಾರವನ್ನು ರಾಜ್ಯ ಸರಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ಪುತ್ತೂರಿನ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯ ಕೊಟ್ಟಿರುವ ತೀರ್ಮಾನದ ಬಗ್ಗೆ ನನಗೆ ಶಾಕ್ ಆಗಿದೆ. ಸಂತ್ರಸ್ತೆಗೆ ಕೇವಲ ಪರಿಹಾರ ನೀಡುವುದರಿಂದ ನ್ಯಾಯ ಸಿಗಲು ಸಾಧ್ಯವಿಲ್ಲ. ನ್ಯಾಯಾಲಯದ ತೀರ್ಮಾನದ ಬಗ್ಗೆ ಮತ್ತೆ ಮೇಲ್ಮನವಿ ಸಲ್ಲಿಸಬೇಕಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಂಡು ಹೋಗಬೇಕಾಗುತ್ತದೆ. ನಾವು ಎಲ್ಲ ಹಂತದಲ್ಲೂ ಸಂತ್ರಸ್ತೆಯ ಪರವಾಗಿ ನಿಲ್ಲುತ್ತೇವೆ ಎಂದರು.
ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಮಹಿಳೆಯರ ಅಸಹಜ ಸಾವು ಹಾಗೂ ನಾಪತ್ತೆ ಪ್ರಕರಣಗಳ ತನಿಖೆಯ ವರದಿಯನ್ನು ವಿಶೇಷ ತನಿಖಾ ತಂಡ ಆಯೋಗಕ್ಕೆ ಇನ್ನೂ ಸಲ್ಲಿಸಿಲ್ಲ. ಆದರೆ ಅದರ ತನಿಖೆ ಮುಂದುವರೆಯುತ್ತದೆ ಎಂದು ತಿಳಿಸಿದರು.