-->
ಶರಣರ ತತ್ವ- ಆದರ್ಶಗಳು ಮುಂದಿನ ಪೀಳಿಗೆಗೆ ತಲುಪಲಿ- ಎಂ.ಎ. ಗಫೂರ್

ಶರಣರ ತತ್ವ- ಆದರ್ಶಗಳು ಮುಂದಿನ ಪೀಳಿಗೆಗೆ ತಲುಪಲಿ- ಎಂ.ಎ. ಗಫೂರ್


ಸಮಾಜದ ಒಳಿತಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸಂತರು, ಶರಣರು ಮತ್ತು ಮಹಾನ್ ವ್ಯಕ್ತಿಗಳ ಆದರ್ಶಗಳು ಸಮಾಜದ ಅಮೂಲ್ಯ ಆಸ್ತಿಯಾಗಿದ್ದು, ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಹೇಳಿದರು.


ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ಸೋಮವಾರ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿವಶರಣೆ ಹೇಮರೆಡ್ಡಿ ಮಲ್ಲಮ್ಮರ ವಚನಗಳಲ್ಲಿ ಭಕ್ತಿ, ನಿಷ್ಠೆ ಹಾಗೂ ಧಾರ್ಮಿಕ ಮೌಲ್ಯಗಳ ಸಾರ ಅಡಕವಾಗಿದ್ದು, ಅವುಗಳನ್ನು ಪ್ರತಿಯೊಬ್ಬರೂ ಅರ್ಥಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಡಾ. ನಿರಂಜನ ಯು.ಸಿ., ಶ್ರೀಶೈಲ ಮಲ್ಲಿಕಾರ್ಜುನರ ಭಕ್ತೆಯಾದ ಹೇಮರೆಡ್ಡಿ ಮಲ್ಲಮ್ಮ ಮಾನಸಿಕ ಶಿವಲಿಂಗ ದೀಕ್ಷೆಯನ್ನು ತೊಟ್ಟು ಸಮಾಜ, ನಾಡು, ನುಡಿ ಹಾಗೂ ಮನುಕುಲದ ಉದ್ಧಾರಕ್ಕಾಗಿ ಅಪಾರ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ದೇವರು ಮತ್ತು ಭಕ್ತನ ನಡುವಿನ ಸಂಬಂಧವನ್ನು ಅರಿಯಲು ಶರಣ ಸಾಹಿತ್ಯ ಓದಬೇಕು. ಕನ್ನಡದ ಶರಣ ಸಾಹಿತ್ಯ ನಮ್ಮ ಸಂಸ್ಕೃತಿಯ ಶ್ರೀಮಂತ ಪರಂಪರೆಯಾಗಿದೆ ಎಂದರು. ತೆಲುಗಿನ ಮೇರುಕವಿ ವೇಮನನ್ನು ಸನ್ಮಾರ್ಗದತ್ತ ದಾರಿತೋರಿಸಿ ಯೋಗಿಯಾಗಿ ರೂಪಿಸಿದ ಕೀರ್ತಿ ಹೇಮರೆಡ್ಡಿ ಮಲ್ಲಮ್ಮರಿಗೆ ಸಲ್ಲುತ್ತದೆ. ಅವರು ಆದರ್ಶ ಸ್ತ್ರೀಶಕ್ತಿಯಾಗಿದ್ದು, ಅವರ ಜೀವನ ಮೌಲ್ಯಗಳು ಮನೆಮಾತಾಗಬೇಕು ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಇತ್ತೀಚೆಗೆ ನಿಧನರಾದ ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಡಾ. ಗಣನಾಥ ಎಕ್ಕಾರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಾಂತನ ಗೌಡ ವಂದಿಸಿದರು.

Ads on article

Advertise in articles 1

advertising articles 2

Advertise under the article