ಸಚಿವ ಡಿ. ಸುಧಾಕರ್ ಇನ್ನಿಲ್ಲ
ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯದ ಯೋಜನೆ ಹಾಗೂ ಸಂಖ್ಯಾ ಇಲಾಖೆ ಸಚಿವ ಡಿ. ಸುಧಾಕರ್ ಅವರು ಇಂದು ನಸುಕಿನ 3.15ರ ಸುಮಾರಿಗೆ ನಿಧನರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು.
ಮೊದಲು ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.
ನಾಲ್ಕು ಬಾರಿ ಶಾಸಕರಾಗಿದ್ದ ಡಿ. ಸುಧಾಕರ್ ಅವರು ಚಿತ್ರದುರ್ಗದ ಪ್ರಭಾವಿ ರಾಜಕೀಯ ನಾಯಕರಾಗಿದ್ದರು.
ಸಿದ್ದರಾಮಯ್ಯ ಸಂತಾಪ: “ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಸುಧಾಕರ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು. ಜನಸೇವೆಯಲ್ಲಿ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಮುಖ್ಯಮಂತ್ರಿ ಸಂತಾಪ ವ್ಯಕ್ತಪಡಿಸಿದ್ದಾರೆ.