ಜು.11:ರಾಷ್ಟ್ರೀಯ ಲೋಕ ಅದಾಲತ್: ಉಡುಪಿ ಜಿಲ್ಲೆಯಲ್ಲಿ 2,000 ಪ್ರಕರಣಗಳ ಇತ್ಯರ್ಥಕ್ಕೆ ಗುರಿ
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜುಲೈ 11ರಂದು ಉಡುಪಿ, ಕುಂದಾಪುರ, ಕಾರ್ಕಳ ಹಾಗೂ ಬೈಂದೂರು ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಅನ್ನು ಆಯೋಜಿಸಿದೆ. ಈ ಲೋಕ ಅದಾಲತ್‌ನಲ್ಲಿ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಿತಿನ್ ರಾವ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಒಟ್ಟು 34,856 ಪ್ರಕರಣಗಳು ವಿಚಾರಣೆಗೆ ಬಾಕಿ ಇದ್ದು, ಅವುಗಳಲ್ಲಿ ಸಂಧಾನ ಹಾಗೂ ಪರಸ್ಪರ ಮಾತುಕತೆಯ ಮೂಲಕ ಇತ್ಯರ್ಥಗೊಳಿಸಬಹುದಾದ 3,544 ಪ್ರಕರಣಗಳನ್ನು ಗುರುತಿಸಲಾಗಿದೆ ಎಂದು ಹೇಳಿದರು.
ಈಗಾಗಲೇ 505 ಪ್ರಕರಣಗಳಲ್ಲಿ ಮಾತುಕತೆ ನಡೆದು ರಾಜಿಗೆ ಒಪ್ಪಿಗೆ ದೊರೆತಿದೆ. ಉಳಿದ ಪ್ರಕರಣಗಳಲ್ಲಿಯೂ ಸಂಧಾನದ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಇತ್ಯರ್ಥ ಸಾಧಿಸಲು ಪ್ರಯತ್ನಿಸಲಾಗುತ್ತಿದ್ದು, ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಕನಿಷ್ಠ 2,000 ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದರು.
ಲೋಕ ಅದಾಲತ್‌ನಲ್ಲಿ ಭಾಗವಹಿಸುವ ಮೂಲಕ ನ್ಯಾಯಾಲಯದ ವ್ಯಾಜ್ಯಗಳನ್ನು ಶೀಘ್ರ, ಸರಳ ಹಾಗೂ ಕಡಿಮೆ ವೆಚ್ಚದಲ್ಲಿ ಇತ್ಯರ್ಥಪಡಿಸಿಕೊಳ್ಳುವ ಅವಕಾಶವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಅವಕಾಶ ಸಿಕ್ಕಿಂತಾಗುತ್ತದೆ. ಲೋಕ ಅದಾಲತ್ ನಲ್ಲಿ ವ್ಯಾಜ್ಯ ಪೂರ್ವ ಪ್ರಕರಣಗಳಾದ ಚೆಕ್ ಅಮಾನ್ಯ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ, ಕಾರ್ಮಿಕ ವಿವಾದ, ವೈವಾಹಿಕ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಬಹುದು. ಲೋಕ ಅದಾಲತ್ ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಪಡೆದುಕೊಳ್ಳಬಹುದು ಎಂದರು.
ಸುದ್ದಿಗೋಷ್ಟಿಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಕಿರಣ್ ಎಸ್.ಗಂಗಣ್ಣವರ್ ಉಪಸ್ಥಿತರಿದ್ದರು.