ಜೂ.12ರಂದು ಉಡುಪಿ ಮಂಗಳೂರಿಗೆ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಭೇಟಿ
Wednesday, June 10, 2026
ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್ 12ರಂದು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಆಗಮಿಸಲಿರುವ ಅವರು ಶುಕ್ರವಾರ ಮಧ್ಯಾಹ್ನ 12.30ಕ್ಕೆ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಬಳಿಕ ರಸ್ತೆ ಮಾರ್ಗವಾಗಿ ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಪ್ರಯಾಣ ಬೆಳೆಸಲಿದ್ದು, ಮಧ್ಯಾಹ್ನ 3 ಗಂಟೆಗೆ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆಯಲಿದ್ದಾರೆ.
ದೇವಸ್ಥಾನ ಭೇಟಿ ಬಳಿಕ ಅವರು ಮಂಗಳೂರು ವಿಮಾನ ನಿಲ್ದಾಣಕ್ಕೆ ಮರಳಲಿದ್ದು, ಅಲ್ಲಿಂದ ವಿಶೇಷ ವಿಮಾನದ ಮೂಲಕ ಮತ್ತೆ ದೆಹಲಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲು ತಮಿಳುನಾಡು ಡಿಜಿಪಿ ಕಂಟ್ರೋಲ್ ರೂಮ್ ವತಿಯಿಂದ ಕರ್ನಾಟಕ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲಾಗಿದೆ. ಭೇಟಿ ಅವಧಿಯಲ್ಲಿ ಸೂಕ್ತ ಝಡ್ ಪ್ಲಸ್ ಭದ್ರತೆ ಒದಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ, ರಾಷ್ಟ್ರೀಯ ಹೆದ್ದಾರಿ ಮಾರ್ಗ ಹಾಗೂ ಕೊಲ್ಲೂರು ದೇವಸ್ಥಾನ ಸುತ್ತಮುತ್ತ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ನಡೆಸುತ್ತಿವೆ ಎಂದು ತಿಳಿದುಬಂದಿದೆ.