2 ದಿನಗಳೊಳಗೆ ಉಡುಪಿ ಸರ್ವೀಸ್ ಬಸ್ ನಿಲ್ದಾಣ ತುರ್ತು ದುರಸ್ತಿಗೊಳಿಸಿ: ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ಪಾಲ್ ಸೂಚನೆ
Monday, June 08, 2026
ಶಿಥಿಲಗೊಂಡಿರುವ ಉಡುಪಿಯ ಸರ್ವಿಸ್ ಬಸ್ ನಿಲ್ದಾಣದಲ್ಲಿ ಎರಡು ದಿನಗಳೊಳಗೆ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ಶಾಸಕ ಯಶ್ಪಾಲ್ ಸುವರ್ಣ ಅವರು ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ಉಡುಪಿ ನಗರದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಸೂಕ್ತ ನಿರ್ವಹಣೆಯ ಕೊರತೆಯಿಂದ ಮಳೆಗಾಲದಲ್ಲಿ ಮೇಲ್ಛಾವಣಿಯಿಂದ ನೀರು ಸೋರಿಕೆ ಯಾಗುವ ದೂರಿನ ಹಿನ್ನೆಲೆಯಲ್ಲಿ ಶಾಸಕ ಯಶ್ ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆ ವೇಳೆ ಬಸ್ ನಿಲ್ದಾಣದ ಮೇಲ್ಛಾವಣಿಯ ಶೀಟುಗಳು ಶಿಥಿಲಗೊಂಡಿರುವುದರಿಂದ ಗಾಳಿ, ಮಳೆ ಹಾಗೂ ಬಿಸಿಲಿನ ಸಂದರ್ಭದಲ್ಲಿ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿರುವುದು ಗಮನಕ್ಕೆ ಬಂದಿದೆ. ಎರಡು ದಿನಗಳೊಳಗೆ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದರು.
ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿ ಹೆಚ್ಚಾಗಿರುವ ಬಗ್ಗೆ ಪ್ರಯಾಣಿಕರಿಂದ ದೂರುಗಳು ಕೇಳಿಬಂದಿದ್ದು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ಬಸ್ ನಿಲ್ದಾಣದ ಅವ್ಯವಸ್ಥೆಯ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಬಸ್ ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ನಗರಸಭೆ ಹಾಗೂ ರಾಜ್ಯ ಸರ್ಕಾರದ ಅನುದಾನದ ಕೊರತೆಯಿಂದ ಅಭಿವೃದ್ಧಿ ಕಾಮಗಾರಿಗಳಿಗೆ ಹಿನ್ನಡೆಯಾಗಿದ್ದು, ಮುಂದಿನ ದಿನಗಳಲ್ಲಿ ಬಸ್ ನಿಲ್ದಾಣದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.
ಪರಿಶೀಲನಾ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ನಗರಸಭೆ ಮಾಜಿ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಗಿರೀಶ್ ಅಂಚನ್, ಗಿರಿಧರ ಆಚಾರ್ಯ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಮುಖರಾದ ಮಂಜು ಕೊಳ, ಲಕ್ಷ್ಮಣ್ ಮಲ್ಪೆ ಹಾಗೂ ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

