-->
ಬಡಗಬೆಟ್ಟು ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು: 20 ಲಕ್ಷ ರೂ. ಮೌಲ್ಯದ ಪರಿಕರ ವಿತರಣೆ

ಬಡಗಬೆಟ್ಟು ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು: 20 ಲಕ್ಷ ರೂ. ಮೌಲ್ಯದ ಪರಿಕರ ವಿತರಣೆ


ಶಿಕ್ಷಣ ಕ್ಷೇತ್ರಕ್ಕೆ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನೀಡುತ್ತಿರುವ ಕೊಡುಗೆ ಶ್ಲಾಘನೀಯ ಎಂದು ಮಾಜಿ ಸಚಿವ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಹೇಳಿದರು.


ಶನಿವಾರ ಉಡುಪಿಯ ಪುರಭವನದಲ್ಲಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಜಿಲ್ಲೆಯ ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ಸುಮಾರು 20 ಲಕ್ಷ ರೂ. ಮೌಲ್ಯದ ನೋಟ್ ಪುಸ್ತಕಗಳು ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಸಿ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಅವರು ಅಭಿಪ್ರಾಯಪಟ್ಟರು.


ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಾರ್ವಜನಿಕರ ಪ್ರೋತ್ಸಾಹ ದೊರೆಯುತ್ತಿರುವುದರಿಂದ ಈ ಭಾಗ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿದೆ ಎಂದು ಹೇಳಿದರು. ಸರ್ಕಾರಿ ಶಾಲೆಗಳ ಅಭಿವೃದ್ಧಿಯಲ್ಲಿ ಸರ್ಕಾರದ ಜೊತೆಗೆ ಶಾಲಾಭಿವೃದ್ಧಿ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ಸಹಕಾರವೂ ಮಹತ್ವದ ಪಾತ್ರವಹಿಸುತ್ತಿದೆ ಎಂದು ಅವರು ಹೇಳಿದರು. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಮೂಲಕ ಬಡಗಬೆಟ್ಟು ಸೊಸೈಟಿ ಕನ್ನಡ ಶಾಲೆಗಳ ಉಳಿವಿಗೆ ಸಹಕಾರಿಯಾಗುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ಹಾಗೂ ‘ಸಹಕಾರ ರತ್ನ’ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಿ ಸ್ವಾಗತ ಹಾಗೂ ಪ್ರಾಸ್ತಾವಿಕ ಭಾಷಣ ಮಾಡಿದರು. ಜಿಲ್ಲೆಯ ಸುಮಾರು 50 ಕನ್ನಡ ಮಾಧ್ಯಮ ಶಾಲೆಗಳಿಗೆ ನೋಟ್ ಪುಸ್ತಕಗಳು ಹಾಗೂ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗುತ್ತಿದ್ದು, ಪರಿಸರ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಸಿಗಳನ್ನೂ ವಿತರಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಉಡುಪಿ ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್ ಹಾಗೂ ಸಹಕಾರ ಸಂಘಗಳ ಸಹಾಯಕ ನಿಬಂಧಕ ಸುಧೀರ್ ಕುಮಾರ್ ಜೆ. ಅತಿಥಿಗಳಾಗಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿ ದಾಮೋದರ ಶರ್ಮ ವಿಶೇಷ ಉಪನ್ಯಾಸ ನೀಡಿದರು.

ಉಡುಪಿ ಜಿಲ್ಲೆಯ ಕನ್ನಡ ಮಾಧ್ಯಮ ಶಾಲೆಗಳಲ್ಲಿ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ 24 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಅಲ್ಲದೇ ಉಡುಪಿ ಜಿಲ್ಲೆಯ 45 ಕನ್ನಡ ಮಾಧ್ಯಮ ಶಾಲೆಗಳಿಗೆ ನೋಟ್ ಪುಸ್ತಕಗಳು, 8 ಶಾಲೆಗಳಿಗೆ ಸಮವಸ್ತ್ರಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು. ಪರಿಸರ ಸಂರಕ್ಷಣೆ ಸಂದೇಶ ಸಾರುವ ಉದ್ದೇಶದಿಂದ ಶಾಲಾ ವಿದ್ಯಾರ್ಥಿಗಳಿಗೆ ಸಸಿಗಳನ್ನು ವಿತರಿಸಲಾಯಿತು. 



ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದ ವಿದ್ವಾನ್ ದಾಮೋದರ್ ಶರ್ಮ ಬಾರ್ಕೂರು ಇವರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕರುಗಳಾದ ಪುರುಷೋತ್ತಮ ಶೆಟ್ಟಿ, ಮನೋಹರ ಶೆಟ್ಟಿ, ವಿನಯಕುಮಾರ್, ಸದಾಶಿವ ನಾಯಕ್, ಎಲ್. ಉಮಾನಾಥ್, ಪದ್ಮನಾಭ ನಾಯಕ್, ಜಯ ಶೆಟ್ಟಿ, ಗಾಯತ್ರಿ ಭಟ್, ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ. ಶೇರಿಗಾರ್ ಹಾಗೂ ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

ಕುಂದಾಪುರ ಶಾಖಾ ವ್ಯವಸ್ಥಾಪಕ  ಸಮರ್ಥ್ ಶೆಟ್ಟಿ ಮತ್ತು ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು. 

Ads on article

Advertise in articles 1

advertising articles 2

Advertise under the article