-->
 ಜೂ.21ರಂದು NEET-UG ಮರು ಪರೀಕ್ಷೆ: ಉಡುಪಿಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ಜೂ.21ರಂದು NEET-UG ಮರು ಪರೀಕ್ಷೆ: ಉಡುಪಿಯ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ


ಜೂನ್ 21ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತಾ-ಪ್ರವೇಶ ಪರೀಕ್ಷೆ (NEET-UG) 2026ರ ಮರು ಪರೀಕ್ಷೆಯನ್ನು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಸಲು ಉಡುಪಿ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಡಿದೆ. ಉಡುಪಿ ಜಿಲ್ಲೆಯಾದ್ಯಂತ ಗುರುತಿಸಲಾದ ಆರು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸ್ವರೂಪ ಅವರು ಆದೇಶ ಹೊರಡಿಸಿದ್ದಾರೆ.

ಜೂನ್ 21ರಂದು ಮಧ್ಯಾಹ್ನ 2.00ರಿಂದ ಸಂಜೆ 5.15ರವರೆಗೆ ನಡೆಯಲಿರುವ ಪರೀಕ್ಷೆಯ ಸಂದರ್ಭದಲ್ಲಿ ನ್ಯಾಯಯುತ ಹಾಗೂ ಶಾಂತಿಯುತ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ವಿಶೇಷ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಭದ್ರತಾ ವಲಯವೆಂದು ಘೋಷಿಸಲಾಗಿದೆ.

ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ಫೋಟೋಕಾಪಿ (ಜೆರಾಕ್ಸ್) ಅಂಗಡಿಗಳು, ಸೈಬರ್ ಕೇಂದ್ರಗಳು ಹಾಗೂ ಪುಸ್ತಕ ಮಳಿಗೆಗಳ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಈ ಸಂಸ್ಥೆಗಳು ಪರೀಕ್ಷಾ ಅವಧಿಯಲ್ಲಿ ಮುಚ್ಚಿರಬೇಕೆಂದು ಜಿಲ್ಲಾಡಳಿತ ಸೂಚಿಸಿದೆ.

ಇದಲ್ಲದೆ, ನಿರ್ಬಂಧಿತ ವಲಯದೊಳಗೆ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸಾರ್ವಜನಿಕವಾಗಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಮೌನ ವಾತಾವರಣ ಕಾಪಾಡುವ ಸಲುವಾಗಿ ಧ್ವನಿವರ್ಧಕಗಳು ಹಾಗೂ ಇತರ ಶಬ್ದವರ್ಧಕ ಸಾಧನಗಳ ಬಳಕೆಯ ಮೇಲೂ ನಿರ್ಬಂಧ ಹೇರಲಾಗಿದೆ.

ಅಭ್ಯರ್ಥಿಗಳು ಹಾಗೂ ಅನಧಿಕೃತ ವ್ಯಕ್ತಿಗಳು ಮೊಬೈಲ್ ಫೋನ್, ಟ್ಯಾಬ್ಲೆಟ್, ಬ್ಲೂಟೂತ್ ಸಾಧನ, ಸ್ಮಾರ್ಟ್‌ವಾಚ್, ವ್ಯಾಲೆಟ್, ಪರ್ಸ್, ಕ್ಯಾಲ್ಕುಲೇಟರ್, ಸಡಿಲ ಟಿಪ್ಪಣಿಗಳು ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳು ಅಥವಾ ವೈಯಕ್ತಿಕ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೊಂಡೊಯ್ಯುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಆದರೆ, ಈ ನಿರ್ಬಂಧಗಳು ಅಧಿಕೃತ ಪರೀಕ್ಷಾ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಾಗೂ ಭದ್ರತಾ ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿಗೆ ಅನ್ವಯಿಸುವುದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಭದ್ರತೆ ಹಾಗೂ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲಾಗಿದೆ.

ಪರೀಕ್ಷೆಯ ಪಾವಿತ್ರ್ಯ ಮತ್ತು ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಮನವಿ ಮಾಡಲಾಗಿದೆ.

Ads on article

Advertise in articles 1

advertising articles 2

Advertise under the article