-->
 ಆಗುಂಬೆ ಘಾಟಿಯಲ್ಲಿ ಸೆ.30ರವರೆಗೆ ಭಾರಿ ವಾಹನ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಸೆ.30ರವರೆಗೆ ಭಾರಿ ವಾಹನ ಸಂಚಾರ ನಿಷೇಧ


ಭಾರಿ ಮಳೆ ಹಾಗೂ ಭೂಕುಸಿತದ ಆತಂಕದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿ ಮಾರ್ಗದಲ್ಲಿ ಸೆಪ್ಟೆಂಬರ್ 30ರವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಸ್ವರೂಪ ಟಿ.ಕೆ. ಆದೇಶ ಹೊರಡಿಸಿದ್ದಾರೆ.

ತೀರ್ಥಹಳ್ಳಿ-ಮಲ್ಪೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 169ಎರ ಆಗುಂಬೆ ಘಾಟಿ ಪ್ರದೇಶದಲ್ಲಿ ನಿರಂತರ ಮಳೆಯ ಕಾರಣ ರಸ್ತೆ ಬದಿಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989ರ ಕಲಂ 221(ಎ)(2) ಮತ್ತು (5)ರ ಅನ್ವಯ ಈ ಆದೇಶ ಜಾರಿಗೊಳಿಸಲಾಗಿದೆ. ಆದೇಶದಂತೆ ಆಗುಂಬೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ನಗರ-ಕುಂದಾಪುರ-ಉಡುಪಿ ಮಾರ್ಗವಾಗಿ ಸಂಚರಿಸಬೇಕು. ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ. ಬಾರ್ಡರ್ ಮಾರ್ಗವನ್ನು ಬಳಸಬೇಕು.

ಅದೇ ರೀತಿ ನರಸಿಂಹರಾಜಪುರದಿಂದ ಉಡುಪಿ ಕಡೆಗೆ ಬರುವ ವಾಹನಗಳು ಕೊಪ್ಪ-ಜಯಪುರ-ಬಾಳೆಹೊಳೆ-ಕಳಸ-ಕುದುರೆಮುಖ-ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Ads on article

Advertise in articles 1

advertising articles 2

Advertise under the article