ಇಂದಿನಿಂದ ಕೇರಳಕ್ಕೆ ಮುಂಗಾರು ಆಗಮನ: ಕರಾವಳಿಯಲ್ಲಿ ಜೂ.6ರಿಂದ ಮಳೆ ಚುರುಕು
ರಾಜ್ಯದಲ್ಲಿ ನೈರುತ್ಯ ಮುಂಗಾರು ಮಳೆಯ ಆಗಮನದ ಹಿನ್ನೆಲೆಯಲ್ಲಿ ಹವಾಮಾನದಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ . ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯ ಪ್ರಕಾರ, ಇಂದು ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ.
ಕೇರಳದ ಮೂಲಕ ಜೂ. 4ರ ಸುಮಾರಿಗೆ ನೈರುತ್ಯ ಮುಂಗಾರು ಪ್ರವೇಶಿಸುತ್ತಿರುವ ಪರಿಣಾಮ, ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದಲ್ಲಿ ಜೂನ್ 3ರಿಂದಲೇ ಮಳೆ ಚುರುಕುಗೊಂಡಿದ್ದು, ಜೂನ್ 6ರಿಂದ 9ರವರೆಗೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಅದೇ ರೀತಿ ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಯಾದಗಿರಿ, ಚಿಕ್ಕಮಗಳೂರು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಪ್ರಮಾಣದ ಮಳೆಯಾಗಿದೆ. ಇದರಿಂದ ಹಲವು ಪ್ರದೇಶಗಳಲ್ಲಿ ತಾಪಮಾನ ಇಳಿಕೆಯಾಗಿದ್ದು, ತಂಪಾದ ವಾತಾವರಣ ನಿರ್ಮಾಣವಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು- ಮಿಂಚು ಸಹಿತ ಬಿರುಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಈ ಭಾಗಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಕೆಲವೆಡೆ 60 ಕಿಲೋಮೀಟರ್ ವೇಗದವರೆಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ.
ಮುಂದಿನ ಐದು ದಿನಗಳ ಕಾಲ ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಗರಿಷ್ಠ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಂಡುಬರುವುದಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.