ಎಂಡಿಎಂಎ ಸಾಗಾಟ: ಮೂವರು ಆರೋಪಿಗಳ ಬಂಧನ, 7.64 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ
ಕಾರಿನಲ್ಲಿ ಅಕ್ರಮವಾಗಿ ಎಂಡಿಎಂಎ ಮಾದಕ ದ್ರವ್ಯವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿರುವ ಬಂಟ್ವಾಳ ನಗರ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಮಾದಕ ದ್ರವ್ಯ, ಕಾರು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಬಂಟ್ವಾಳದ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಯಾನೆ ಮಾರಿಮುತ್ತು ಎಂದು ಗುರುತಿಸಲಾಗಿದೆ.
ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಠಾಣಾ ಸಿಬ್ಬಂದಿಗಳೊಂದಿಗೆ ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಸಂಶಯಾಸ್ಪದವಾಗಿ ಬಂದ ಕಾರೊಂದನ್ನು ತಡೆದು ಪರಿಶೀಲಿಸಿದರು. ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ವ್ಯಕ್ತಿಗಳಿದ್ದು, ತಪಾಸಣೆ ವೇಳೆ ಮಾದಕ ವಸ್ತು ಸೇವನೆಗೆ ಬಳಸುವ ವಿಶೇಷ ಸಾಧನವೊಂದು ಪತ್ತೆಯಾಗಿದೆ.
ಅನುಮಾನಗೊಂಡ ಪೊಲೀಸರು ಮೂವರನ್ನು ವಿಚಾರಣೆಗೆ ಒಳಪಡಿಸಿದಾಗ, ಸಾರ್ವಜನಿಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಎಂಡಿಎಂಎ ಮಾದಕ ದ್ರವ್ಯವನ್ನು ಸಾಗಿಸುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಕಾರು ಹಾಗೂ ಆರೋಪಿಗಳ ಬಳಿ ಇದ್ದ 7,64,000 ರೂ. ಮೌಲ್ಯದ ಒಟ್ಟು 76 ಗ್ರಾಂ 40 ಮಿಲಿಗ್ರಾಂ ತೂಕದ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಜೊತೆಗೆ ಮಾದಕ ದ್ರವ್ಯ ಸೇವನೆಗೆ ಬಳಸುತ್ತಿದ್ದ ವಿಶೇಷ ಸಾಧನ, ಕೃತ್ಯಕ್ಕೆ ಬಳಸಿದ ಕಾರು ಹಾಗೂ ಆರೋಪಿಗಳ ಬಳಿಯಿದ್ದ ಮೂರು ಮೊಬೈಲ್ ಫೋನ್ಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಈ ಸಂಬಂಧ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋಪ್ರೇರಕ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಬಂಟ್ವಾಳ ನಗರ ಪೊಲೀಸರು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಕೈಗೊಂಡಿದ್ದಾರೆ.