ಹುಲಿಕಲ್ ಘಾಟ್‌ನಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ: ಉಡುಪಿ ಜಿಲ್ಲಾಧಿಕಾರಿ ಆದೇಶ
ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ-52ರಹುಲಿಕಲ್ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.
ಮೇ ತಿಂಗಳ ಕೊನೆಯಲ್ಲಿ ಸುರಿದ ಭಾರಿ ಮಳೆಯಿಂದ ಬಾಳೆಬರೆ ಘಾಟ್‌ನ ಸರಪಳಿ 42.10ರಿಂದ 42.20ರಲ್ಲಿರುವ ಹೇರ್‌ಪಿನ್ ತಿರುವಿನ ಬಳಿ ಕಾಂಕ್ರೀಟ್ ರಸ್ತೆಯ ಕೆಳಭಾಗದಲ್ಲಿ ಮಣ್ಣಿನ ಕುಸಿತ ಉಂಟಾಗಿತ್ತು. ಇದರ ಪರಿಣಾಮವಾಗಿ ಸುರಕ್ಷತಾ ದೃಷ್ಟಿಯಿಂದ ಈ ಮಾರ್ಗದಲ್ಲಿ ಎಲ್ಲಾ ಮಾದರಿಯ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು.
ಹಾನಿಗೊಳಗಾದ ಹೇರ್‌ಪಿನ್ ತಿರುವಿನ ಭಾಗದಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ಕೈಗೊಳ್ಳಲಾಗಿದ್ದು, ರಸ್ತೆಯ ಮಟ್ಟದವರೆಗೆ ಮಣ್ಣಿನ ಏರಿಯನ್ನು ನಿರ್ಮಿಸಲಾಗಿದೆ. ಅಲ್ಲದೆ ರಸ್ತೆಯ ಹಾನಿಗೊಳಗಾದ ಭಾಗದಲ್ಲಿ ಲೀನ್ ಕಾಂಕ್ರೀಟ್ ಹಾಕಿ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕ ದುರಸ್ತಿ ಕಾರ್ಯ ಪೂರ್ಣಗೊಳಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸೇರಿದಂತೆ ಪ್ರಯಾಣಿಕರ ವಾಹನಗಳು ಹಾಗೂ ಲಘು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಲಾಗಿದೆ. ಶಿವಮೊಗ್ಗ ಜಿಲ್ಲಾಡಳಿತವೂ ಈಗಾಗಲೇ ಬಾಳೆಬರೆ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ ನೀಡಿತ್ತು.
ತೀರ್ಥಹಳ್ಳಿ–ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ ಘಾಟ್‌ನ ಸರಪಳಿ 44.60ರಿಂದ 53.00ರವರೆಗಿನ ಘಾಟಿ ರಸ್ತೆ ಲೋಕೋಪಯೋಗಿ ಇಲಾಖೆಯ ಕುಂದಾಪುರ ಉಪವಿಭಾಗದ ವ್ಯಾಪ್ತಿಗೆ ಬರುತ್ತದೆ. ಈ ರಸ್ತೆಯಲ್ಲಿ ಜೂನ್ 15ರಿಂದ ಬಸ್ ಸೇರಿದಂತೆ ಇತರೆ ಪ್ರಯಾಣಿಕರ ವಾಹನಗಳು ಹಾಗೂ ಲಘು ಗೂಡ್ಸ್ ವಾಹನಗಳು ಸಂಚರಿಸಲು ಅವಕಾಶ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿಗಳ ಆದೇಶದಲ್ಲಿ ತಿಳಿಸಲಾಗಿದೆ. ಸಾರ್ವಜನಿಕರು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿಕೊಂಡು ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.