ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ
Wednesday, June 24, 2026
ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ, ಡಿಐಜಿಪಿ (ನೇಮಕಾತಿ) ಆಗಿದ್ದ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ವಿಧಾನಸೌಧದಿಂದ ಜೂನ್ 24 ರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವಾರ್ತಾ ಇಲಾಖೆಯ ಹಾಲಿ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ಹೇಮಂತ್ ಎಂ.ನಿಂಬಾಳ್ಕರ್ ಅವರನ್ನು ಈ ಹುದ್ದೆಯಿಂದ ವರ್ಗಾವಣೆಗೊಳಿಸಿ, ಅವರ ಸ್ಥಾನಕ್ಕೆ 2009ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ಅವರನ್ನು ನೇಮಿಸಲಾಗಿದೆ.
ಇದರ ಜೊತೆಗೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ಸಹ ಎಂ.ಎನ್.ಅನುಚೇತ್ ಅವರಿಗೆ ವಹಿಸಲಾಗಿದೆ. ಈ ಹಿಂದೆ ಕ್ರೀಡಾ ಇಲಾಖೆ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಕುಮಾರ್ ಟಿ.ಎಚ್.ಎಂ ಅವರನ್ನು ಸರ್ಕಾರ ವರ್ಗಾವಣೆ ಮಾಡಿದೆ. ಮುಂದಿನ ಆದೇಶದವರೆಗೆ ಎಂ.ಎನ್.ಅನುಚೇತ್ ಅವರು ಎರಡೂ ಇಲಾಖೆಗಳ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.