-->
ಗೃಹಲಕ್ಷ್ಮೀ, ಗೃಹಜ್ಯೋತಿ ಮರು ಪರಿಶೀಲನೆ ಕುರಿತು ಸರ್ಕಾರ ಸ್ಪಷ್ಟನೆ ನೀಡಲಿ: ಕೋಟ ಶ್ರೀನಿವಾಸ ಪೂಜಾರಿ

ಗೃಹಲಕ್ಷ್ಮೀ, ಗೃಹಜ್ಯೋತಿ ಮರು ಪರಿಶೀಲನೆ ಕುರಿತು ಸರ್ಕಾರ ಸ್ಪಷ್ಟನೆ ನೀಡಲಿ: ಕೋಟ ಶ್ರೀನಿವಾಸ ಪೂಜಾರಿ


ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಅರ್ಜಿಗಳ ಮರು ಪರಿಶೀಲನೆ ಕುರಿತಾಗಿ ರಾಜ್ಯ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯಡಿ ಒಂದು ಕೋಟಿಗೂ ಹೆಚ್ಚು ಮಹಿಳೆಯರಿಗೆ ಪ್ರಯೋಜನ ನೀಡುತ್ತಿರುವುದಾಗಿ ಸರ್ಕಾರ ಹೇಳಿಕೊಂಡಿತ್ತು. ಆದರೆ ಈಗ ಫಲಾನುಭವಿಗಳ ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಒಳಪಡಿಸಿ, ಅಗತ್ಯವಿದ್ದರೆ ಮರು ಅರ್ಜಿ ಸಲ್ಲಿಸುವಂತೆ ಸೂಚಿಸುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಹೇಳಿದರು. ಈ ಬೆಳವಣಿಗೆಯಿಂದ ಈಗಾಗಲೇ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳಲ್ಲಿ ಆತಂಕ ಉಂಟಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತ್ಯೇಕ ಸಮಿತಿಗಳನ್ನು ರಚಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಸಚಿವ ಸಂಪುಟದ ಸಮಾನ ಸ್ಥಾನಮಾನ ಹೊಂದಿರುವ ಅಧ್ಯಕ್ಷರನ್ನೂ ನೇಮಕ ಮಾಡಲಾಗಿದೆ. ಇಷ್ಟೆಲ್ಲ ವ್ಯವಸ್ಥೆಗಳಿದ್ದರೂ ಮರು ಪರಿಶೀಲನೆಯ ಅಗತ್ಯ ಎದುರಾಗಿರುವುದು ಸರ್ಕಾರದ ಆಡಳಿತಾತ್ಮಕ ವೈಫಲ್ಯವನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.

ಗೃಹಲಕ್ಷ್ಮೀ ಯೋಜನೆಯನ್ನು ಹಂತಹಂತವಾಗಿ ಸೀಮಿತಗೊಳಿಸುವ ಅಥವಾ ಸ್ಥಗಿತಗೊಳಿಸುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಅನುಮಾನ ಫಲಾನುಭವಿಗಳಲ್ಲಿ ಮೂಡಿದೆ. ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಹಿಂಪಡೆಯುವ ತಂತ್ರವನ್ನು ಸರ್ಕಾರ ಅನುಸರಿಸುತ್ತಿದೆಯೇ ಎಂಬ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ಗೃಹಲಕ್ಷ್ಮೀ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಈ ಬೆಳವಣಿಗೆಗಳನ್ನು ಬಿಜೆಪಿ ಗಂಭೀರವಾಗಿ ಗಮನಿಸುತ್ತಿದೆ ಎಂದರು.

ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಕೆಲವು ಸಚಿವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಕೋಟ ಶ್ರೀನಿವಾಸ ಪೂಜಾರಿ, ಸರ್ಕಾರ ಇನ್ನೂ ಸಂಪೂರ್ಣವಾಗಿ “ಟೇಕಾಫ್” ಆಗಿಲ್ಲ ಎಂಬ ಭಾವನೆ ಮೂಡುತ್ತಿದೆ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿಗಳು ಸಂಪುಟದ ಎಲ್ಲ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಟ್ಟಾಗಿ ಮುನ್ನಡೆಸುವುದು ಪ್ರಜಾಪ್ರಭುತ್ವದ ರೂಢಿಯಾಗಿದೆ. ಆದರೆ ಸಚಿವರ ಅಸಮಾಧಾನ ಬಹಿರಂಗವಾಗುತ್ತಿರುವುದು ಸರ್ಕಾರದ ಒಳಗಿನ ಸಮಸ್ಯೆಗಳನ್ನು ಬಯಲಿಗೆಳೆಯುತ್ತಿದೆ ಎಂದು ಅವರು ಹೇಳಿದರು. ಇದು ಕೇವಲ ವಿಪಕ್ಷದ ಟೀಕೆಯಲ್ಲ, ಸರ್ಕಾರದ ಕಾರ್ಯವೈಖರಿಯ ಮೇಲೆ ನಿಗಾ ಇಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ತಿಳಿಸಿದರು.

Ads on article

Advertise in articles 1

advertising articles 2

Advertise under the article